ಬೆಂಗಳೂರು: ನ್ಯಾಯಾಲಯದ ಅನುಮತಿ ಇಲ್ಲದೇ ಪ್ರಸ್ತಾವಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಾಹೀರಾತು ಬೈಲಾ 2024ರ (ಫ್ಲೆಕ್ಸ್, ಹೋರ್ಡಿಂಗ್ಸ್‌ಗಳ) ಅಧಿಸೂಚನೆ ಹೊರಡಿಸದಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೊರ್ಟ್ ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ಜಾಹೀರಾತು ಪ್ರಕಟಿಸುವ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಗರದಲ್ಲಿ ಜಾಹೀರಾತು ಹೊರಡಿಸುವುದಕ್ಕೆ ಸಂಬಂಧಿಸಿದಂತೆ ಬೈಲಾ ನಿಯಮಗಳನ್ನು ತಿದ್ದುಪಡಿ ಮಾಡುವುದಕ್ಕೆ ಬಿಬಿಎಂಪಿ ಮುಂದಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಸಂಬಂಧಪಟ್ಟವರು ಮತ್ತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ಈ ವೇಳೆ, ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಸರ್ಕಾರದ ಅನುಮತಿ ಪಡೆದ ಬಳಿಕ ಬೈಲಾದ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ನ್ಯಾಯಪೀಠ, ನಗರದಲ್ಲಿ ಅಳವಡಿಸಿರುವ ಫ್ಲೆಕ್ಸ್, ಹೋರ್ಡಿಂಗ್ಸ್ ಮತ್ತು ಅಕ್ರಮ ಜಾಹೀರಾತುಗಳಿಗೆ ಸಂಬಂಧಿಸಿದ ಅರ್ಜಿಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ. ಈ ನಿಟ್ಟಿನಲ್ಲಿ ಈ ಸಂಬಂಧ ಅಧಿಸೂಚನೆ ಹೊರಡಿಸಬೇಕಾದರೂ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 8ಕ್ಕೆ ಮುಂದೂಡಿತು.
ಬಿಬಿಎಂಪಿ ಪರ ವಕೀಲರು ಪ್ರಮಾಣ ಪತ್ರ ಸಲ್ಲಿಸಿ, ನಗರದಲ್ಲಿ ಅಕ್ರಮವಾಗಿ ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್ ಮತ್ತು ಎಲ್‌ಇಡಿ ಫಲಕಗಳು ಸೇರಿ ಒಟ್ಟು 9,761ಗಳನ್ನು ತೆರವುಗೊಳಿಸಲಾಗಿದೆ. 154 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 3,09,400 ದಂಡವನ್ನು ವಿಧಿಸಲಾಗಿದೆ ಎಂದು ತಿಳಿಸಿದರು.