ಬೆಂಗಳೂರು: ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳು ಮತ್ತು ನೀರು ಕಾಯಿದೆ (ವಾಟರ್ ಆ್ಯಕ್ಟ್) ನಿಬಂಧನೆಗಳನ್ನು ಉಲ್ಲಂಘಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ)ಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ರಾಜ್ಯ ಸರ್ಕಾರಕ್ಕೆ ಇಂದು ಹೈಕೋರ್ಟ್ ನೋಟಿಸ್ ಜಾರಿ ಮಾಡಿತು.
ಕೆಎಸ್‌ಪಿಸಿಬಿ ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ನೇಮಿಸಿರುವ ಕ್ರಮವನ್ನು ಪ್ರಶ್ನಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆರ್.ಆಂಜನೇಯ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ಎಂ.ಐ.ಅರುಣ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರ, ಪರಿಸರ ನಿಯಂತ್ರಣ ಮಂಡಳಿ ಹಾಗೂ ಅಧ್ಯಕ್ಷರಾಗಿ ನೇಮಕವಾಗಿರುವ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ ಕೋರ್ಟ್ ವಿಚಾರಣೆ ಮುಂದೂಡಿತು.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರ ನೇಮಕ ಸಂಬಂಧ ಸುಪ್ರೀಂ ಕೋರ್ಟ್ ಸ್ಪಷ್ಟ ಮಾರ್ಗಸೂಚಿ ನೀಡಿದೆ. ಆದರೆ ರಾಜ್ಯ ಸರ್ಕಾರ ಆ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ. ಅಲ್ಲದೆ, ಪರಿಸರ ವಿಜ್ಞಾನ ಸೇರಿದಂತೆ ಯಾವುದೇ ನಿರ್ದಿಷ್ಟ ಅರ್ಹತೆ ಇಲ್ಲದವರನ್ನು ರಾಜಕೀಯ ಕಾರಣಗಳಿಗೆ ನೇಮಕ ಮಾಡಲಾಗಿದೆ. ಹಾಗಾಗಿ ನೇಮಕ ಆದೇಶವನ್ನು ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಇದನ್ನೂ ಓದಿ: ನಿವೃತ್ತ ಪ್ರಾಧ್ಯಾಪಕರಿಗೆ ಪಿಂಚಣಿ ಪರಿಷ್ಕರಿಸಿ ಪಾವತಿಸಲು ಸೂಚನೆ ನೀಡಿದ್ದ ಆದೇಶ ರದ್ದು