ವಿಜಯಪುರ: ಶಾಲೆಯ ಸ್ಟಾಕ್ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯರ ಶವ ಪತ್ತೆಯಾಗಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಘಟನೆ ನಡೆದಿದೆ.
ಸಿ.ಎಸ್.ಹಡಪದ ಶವವಾಗಿ ಪತ್ತೆಯಾದ ಮುಖ್ಯೋಪಾಧ್ಯಾಯರು. ಇವರು ಕಳೆದ ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಾಲಾ ಅವಧಿ ಮುಗಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಹಾಗೂ ಇತರ ಶಿಕ್ಷಕರು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ. ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಸರ್ಕಾರಿ ನೌಕರರ ಸಂಘದಿಂದಲೂ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.