ಬೆಂಗಳೂರು: ವೈದ್ಯಕೀಯ ಮತ್ತು ಆರೋಗ್ಯ ರಕ್ಷಣೆ ಮೂಲಭೂತ ಹಕ್ಕಾಗಿದ್ದು, ಅದಕ್ಕಾಗಿ ಅಗತ್ಯ ಸೌಕರ್ಯ ಒದಗಿಸುವುದು ಸರ್ಕಾರದ ಬಾಧ್ಯತೆಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ರಾಜ್ಯದಲ್ಲಿ ಸುಮಾರು 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತಂತೆ ಮಾಧ್ಯಮದಲ್ಲಿ ಪ್ರಕಟವಾದ ವರದಿ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿದ್ಧ ವಿಭಾಗೀಯ ಪೀಠ ಹೀಗೆ ಅಭಿಪ್ರಾಯ ಪಟ್ಟಿದೆ.
ಅಲ್ಲದೆ, ನಗರ, ಜಿಲ್ಲೆ ಮತ್ತು ಗ್ರಾಮೀಣ ಭಾಗ ಸೇರಿ ರಾಜ್ಯದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಮೂಲಸೌಕರ್ಯ ಹಾಗೂ ಸಿಬ್ಬಂದಿ ಕೊರತೆ ಆಗದಂತೆ ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಮೂವರು ಸದಸ್ಯರ ಸಮಿತಿ ರಚನೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಆರೋಗ್ಯದ ಹಕ್ಕು ಮತ್ತು ವೈದ್ಯಕೀಯ ರಕ್ಷಣೆಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿದಾಗ, ಗ್ರಾಮಾಂತರ ಪ್ರದೇಶ ಸೇರಿದಂತೆ ಅಗತ್ಯವಿರುವೆಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ, ಸೂಕ್ತ ವೈದ್ಯಕೀಯ ಸಿಬ್ಬಂದಿ ನಿಯೋಜನೆ, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕಾದ ಸಂವಿಧಾನ ಬದ್ಧ ಕರ್ತವ್ಯವಾಗಿದ್ದು, ಅದನ್ನು ಸರ್ಕಾರ ನಿರ್ವಹಿಸಬೇಕಾಗುತ್ತದೆ. ಆರೋಗ್ಯ ಹಕ್ಕು ಆನಂದಿಸಬೇಕಾದ ಈ ಎಲ್ಲಾ ಮೂಲಭೂತ ಅಗತ್ಯತೆಗಳನ್ನು ಸರ್ಕಾರ ಪೂರೈಸಬೇಕಾಗುತ್ತದೆ ಎಂದು ಹೇಳಿದೆ.
ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ವೈದ್ಯಕೀಯ ಸೌಕರ್ಯಗಳ ಅಗತ್ಯತೆಯನ್ನು ಪೂರೈಸಲು ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸದಾ ಜಾಗೃತ ಮತ್ತು ಸಕ್ರಿಯವಾಗಿರಬೇಕಾಗುತ್ತದೆ. ಆ ಮೂಲಕ ಗ್ರಾಮೀಣ ಜನವಸತಿಯ ಮನೆ ಬಾಗಿಲಿಗೆ ವೈದ್ಯಕೀಯ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.
ಈ ಕುರಿತಂತೆ ಸರ್ಕಾರ ಒದಗಿಸುವ ಮೂಲಸೌಕರ್ಯಗಳ ಮೇಲೆ ನಿಗಾ ಇಡುವುದಕ್ಕಾಗಿ ಮೂವರು ಸದಸ್ಯರ ಸಮಿತಿ ರಚಿಸಬೇಕು, ಆ ಸಮಿತಿ ಆರು ತಿಂಗಳಿಗೊಮ್ಮೆ ಸಭೆ ಸೇರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿಎಷ್ಟು ವೈದ್ಯಕೀಯ ಸಿಬ್ಬಂದಿ ಹಾಗೂ ಮೂಲಸೌಕರ್ಯ, ಔಷಧಗಳ ಕೊರತೆ ಇದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಬಳಿ ಈ ಬಗ್ಗೆ ಅವಲೋಕಿಸಿ, ಅವುಗಳನ್ನು ಒದಗಿಸಲು ಕಾರ್ಯತಂತ್ರ ಅನುಸರಿಸಿ, ಜಾರಿಗೊಳಿಸುವ ಬಗ್ಗೆ ನಿರಂತರ ನಿಗಾ ಇರಿಸಬೇಕು. ಸರ್ಕಾರ ಪ್ರತಿ ಆರು ತಿಂಗಳಿಗೊಮ್ಮೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಗ್ಗೆ ಸರ್ವೇ ನಡೆಸಿ ಕೊರತೆಗಳನ್ನು ನಿವಾರಿಸಿ, ಅವುಗಳನ್ನು ಉನ್ನತೀಕರಿಸಲು ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಬೇಕು ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ನ್ಯಾಯಾಲಯಕ್ಕೆ ಭರವಸೆ ನೀಡಿದೆ. ಅದರಂತೆ ಖಾಲಿ ಇರುವ ವಿವಿಧ ಶ್ರೇಣಿಯ ಹುದ್ದೆಗಳನ್ನು ಆದ್ಯತೆಯ ಮೇರೆಗೆ ತುಂಬಲು ಸಾಧ್ಯವಾದ ಎಲ್ಲಾ ಕ್ರಮಗಳನ್ನು ಜರುಗಿಸಬೇಕು. ಈಗಾಗಲೇ ಆರಂಭಿಸಲಾಗಿರುವ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು ಎಂದು ನ್ಯಾಯಪೀಠ ಪೀಠ ಸೂಚನೆ ನೀಡಿದೆ.
ಕೇಂದ್ರ, ರಾಜ್ಯ ಸರ್ಕಾರ ಸಮನ್ವಯ ಅಗತ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರ ಆರೋಗ್ಯ ಯೋಜನೆಗಳ ನಡುವೆ ಸಮನ್ವಯ ಅಗತ್ಯವಿದೆ ಎಂದು ಹೇಳಿರುವ ನ್ಯಾಯಾಲಯ, ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಸ್ಥೆಗಳ ನಡುವೆ ಸಮನ್ವಯಕ್ಕಾಗಿ ಕಾರ್ಯತಂತ್ರವನ್ನು ರೂಪಿಸಬೇಕು. ಬಜೆಟ್ ನಲ್ಲಿಆರೋಗ್ಯ ವಲಯಕ್ಕೆ ಹಂಚಿಕೆಯಾಗುವ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆ ಅಗತ್ಯವಿರುವವರನ್ನು ಗುರುತಿಸಿ ಅಂತಹವರಿಗೆ ಯಾವ ಯೋಜನೆಗಳಲ್ಲಿ ನೆರವು ನೀಡಬಹುದೆಂದು ಆಲೋಚಿಸಿ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಅರ್ಜಿಯನ್ನು ವಿಲೇವಾರಿ ಮಾಡಿದ್ದರೂ ಸಹ ಸರ್ಕಾರ ಮೂಲಸೌಕರ್ಯ ಹಾಗೂ ಸಿಬ್ಬಂದಿ ಕೊರತೆ ನೀಗಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ: ವರದಕ್ಷಿಣೆ ಪಿಡುಗು ಜಾರಿಯಲ್ಲಿರುವುದು ದುರದೃಷ್ಟಕರ, ಈ ಘಟನೆಗಳು ದೇಶದ ಅಭಿವೃದ್ಧಿ ಕಂಟಕ: ಹೈಕೋರ್ಟ್