ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದ್ದು ಸಾರ್ವಜನಿಕರು ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಖ್ಯವಾಗಿ ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಮೇ. 2ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿದೆ. ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38 ಡಿಗ್ರಿ ಮತ್ತು 23 ಡಿಗ್ರಿ ಇರಲಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮೇ ಮೊದಲ ವಾರದಲ್ಲಿ ಗರಿಷ್ಠ 45 ಡಿಗ್ರಿ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಬಿಸಿಲು ಹೆಚ್ಚಿದೆ. ಮೇ ಎರಡನೆಯ ವಾರ್ಡ್ ನಂತರ ಉಷ್ಣಾಂಶ ಸ್ವಲ್ಪ ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡುವ ಜನರಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದ ಕಾಯಿಲೆಯ ಲಕ್ಷಣಗಳ ಹೆಚ್ಚಿನ ಸಂಭವನೀಯತೆ ಇದೆ. ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆಗಳಿರುವ ಜನರಂತಹ ದುರ್ಬಲ ಜನರು ಹೆಚ್ಚಿನ ಆರೋಗ್ಯ ಕಾಳಜಿ ವಹಿಸಬೇಕು ಎಂದಿದೆ.
ಜನರು ಏನ್ ಮಾಡಬೇಕು; ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00ರ ವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದೆ.
ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಬೇಕು. ಹೆಚ್ಚಿನ ಪ್ರೋಟೀನ್ ಮತ್ತು ತಂಗಳು ಆಹಾರವನ್ನು ಸೇವಿಸಬಾರದು. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಬೇಕು ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು ಎಂಬ ಸೂಚನೆಗಳನ್ನು ಹವಾಮಾನ ಇಲಾಖೆ ನೀಡಿದೆ.