ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆ ಜಿಲ್ಲೆಯ ಶಾಲೆ ಮತ್ತು ಪಿಯುಸಿ ತರಗತಿಗಳಿಗೆ ಇಂದು (ಶನಿವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ಗಳಿಗೆ ಇಂದು ರಜೆ ಘೋಷಿಸಿದ್ದಾರೆ.
ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು, ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಇಂದು ಮತ್ತು ನಾಳೆ ರೆಡ್ ಅಲರ್ಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಹಗಲಿನಲ್ಲಿ ಮಳೆ ಪ್ರಮಾಣ ತುಸು ಕಡಿಮೆಯಿತ್ತು. ಆದರೆ ಸಂಜೆಯ ಬಳಿಕ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಶನಿವಾರ ದ.ಕ. ಮತ್ತು ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದ್ದು, ವಿವಿಧೆಡೆ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ರೆಡ್ ಅಲರ್ಟ್ ಇದ್ದು, ಆ ಬಳಿಕ ಎಲ್ಲೋ ಅಲರ್ಟ್ ಮುಂದುವರಿಯಲಿದೆ.
ಓದಿ: ಬೆಂಗಳೂರಲ್ಲಿ ವರ್ಷಧಾರೆ: ಜುಲೈ 9ರ ವರೆಗೆ ಮಳೆ ಮುಂದುವರಿಕೆ - Heavy rain in Bengaluru