ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶಿಸಿದೆ.
ಇದೇ ವೇಳೆ ಹೈಕೋರ್ಟ್‌ನಲ್ಲಿ ಹಾಲಿ ಎರಡನೇ ಹಿರಿಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ಎಸ್ ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಚೇರಿಯ ಕರ್ತವ್ಯಗಳನ್ನು ನಿರ್ವಹಣೆ ಮಾಡುವಂತೆ ಸೂಚನೆ ನೀಡಿ, ಅಧಿಸೂಚನೆ ಹೊರಡಿಸುವಂತೆ ಆದೇಶದಲ್ಲಿ ತಿಳಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದಿದ್ದ ಸುಪ್ರೀಂಕೋರ್ಟ್ ಕೊಲಿಜಿಯಂನಲ್ಲಿ ಈ ತೀರ್ಮಾನ ಕೈಗೊಂಡು, ಅದರಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಅದರಂತೆ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ ನ್ಯಾ. ಸಂಜಯ್ ಕಿಶನ್ ಕೌಲ್ ಕಳೆದ ಡಿ. 25 ರಂದು ನಿವೃತ್ತರಾಗಿದ್ದರು. ಆ ಖಾಲಿ ಇದ್ದ ಸ್ಥಾನಕ್ಕೆ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವವರ ಸೇವಾ ಹಿರಿತನ, ಜೇಷ್ಠತೆ, ಲಿಂಗ, ಪ್ರದೇಶ, ಜಾತಿ ಪ್ರಾತಿನಿಧ್ಯಗಳನ್ನು ಪರಿಗಣಿಸಿ ಪ್ರಸನ್ನ ಬಾಲಚಂದ್ರ ವರಾಳೆ ಅವರಿಗೆ ಬಡ್ತಿ ನೀಡಲು ನಿರ್ಧರಿಸಲಾಗಿತ್ತು.
ಮೂಲತಃ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ವರಾಳೆ ಅವರು ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿದ್ದು, ಹಾಗೂ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ. ಅವರು ಎಲ್ಲ ರೀತಿಯಲ್ಲೂ ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳಾಗಲು ಅರ್ಹರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್ ಕೊಲಿಜಿಯಂ ತಿಳಿಸಿತ್ತು.
ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಸಿಜೆ ಪಿಬಿ ವರಾಳೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಶಿಫಾರಸು