ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳಿಗೆ ಅಡ್ಡಿಯಾಗದಂತೆ ಹಾಗೂ ಜನದಟ್ಟಣೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಅಕ್ರಮವಾಗಿ ಜಾಹೀರಾತುಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಪೊಲೀಸ್ ಇಲಾಖೆಗೆ ಹೈಕೋರ್ಟ್ ಇಂದು ನಿರ್ದೇಶನ ನೀಡಿದೆ.
ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳ ಅಳವಡಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಇದೇ ವಿಚಾರವಾಗಿ ಮಾಧ್ಯಮಗಳ ವರದಿಯನ್ನು ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಆರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ನಗರದಲ್ಲಿ ಅಕ್ರಮವಾಗಿ ಅಳವಡಿಸುವ ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ಕುರಿತಂತೆ ಬಿಬಿಎಂಪಿ ಮೇಲ್ವಿಚಾರಣೆ ಮಾಡಬೇಕು. ಉಲ್ಲಂಘನೆಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿತು. ಮುಂಗಾರು ಮಳೆ ಹೆಚ್ಚಿರುವ ಹಿನ್ನೆಲೆಯಲ್ಲಿ ವಿಶೇಷ ನಿಗಾ ವಹಿಸಬೇಕು ಎಂದು ತಿಳಿಸಿತು.
ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಪ್ರತಿಮಾ ಹೊನ್ನಾಪುರ, ನಗರದಲ್ಲಿ ಅಕ್ರಮ ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಬೈಲಾ ಕರಡು ಸಿದ್ಧಪಡಿಸಲಾಗಿದೆ. ಇದಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಸಂಬಂಧ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದು, ಎಲ್ಲ ಆಕ್ಷೇಪಣೆಗಳನ್ನು ಪರಿಗಣಿಸಿ ಅಂತಿಮವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿದಾರರು ಸಲಹೆ ಸೂಚನೆಗಳನ್ನು ನೀಡಬಹುದು. ಅವುಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಪೀಠದೆದುರು ಮಂಡಿಸಬೇಕು ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಅರ್ಜಿದಾರರಲ್ಲಿ ಒಬ್ಬರಾದ ಮೃತ ಸಾಹಿದತ್ತ ಪರ ವಕೀಲರು, ಬೆಂಗಳೂರು ನಗರ ಮಾತ್ರವಲ್ಲದೆ, ರಾಜ್ಯದಲ್ಲಿ ರಾಜಕಾರಣಿಗಳ ಶುಭಾಶಯಗಳು ಹಾಗೂ ಜನ್ಮ ದಿನಾಚರಣೆಗಳಂತಹ ದೊಡ್ಡ ಫ್ಲೆಕ್ಸ್‌ಗಳನ್ನು ಅಳವಡಿಸಲಾಗುತ್ತಿದೆ. ಸರ್ಕಾರದ ಪ್ರಾಧಿಕಾರಗಳ ವಿರುದ್ಧ ಕ್ರಮಕ್ಕೆ ಮುಂದಾಗಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ವಕೀಲ ಜಿ.ಆರ್.ಮೋಹನ್ ವಾದಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ಸಂಖ್ಯೆ ಕಡಿಮೆಯಾಗಿದೆ. ಆದರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದಲ್ಲಿ ಹೆಚ್ಚು ಅಕ್ರಮ ಜಾಹೀರಾತು ಫಲಕಗಳನ್ನು ಅಳವಡಿಸಲಾಗಿದೆ. ಇದಕ್ಕೆ ಜಿಲ್ಲಾಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ನ್ಯಾಯಪೀಠ, ಬೈಲಾಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ ಸೆಪ್ಟಂಬರ್ 18ರೊಳಗೆ ಸಲ್ಲಿಸಬೇಕು ಎಂದು ತಿಳಿಸಿ ವಿಚಾರಣೆಯನ್ನು ಸೆಪ್ಟಂಬರ್ 25ಕ್ಕೆ ಮುಂದೂಡಿತು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆಯಿಂದಾಗಿ ಲೇಔಟ್ ಜಲಾವೃತ : ಪಾಲಿಕೆ ವಿರುದ್ಧ ಸ್ಥಳೀಯರು ಗರಂ - Bengaluru rain