ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಕಳಪೆ ಕಾಮಗಾರಿ ನಡೆಸಿದ ಮತ್ತು ಕಾರ್ಯಾದೇಶವಿಲ್ಲದೆ ಗುತ್ತಿಗೆದಾರನಿಗೆ ಸರ್ಕಾರದ ಹಣವನ್ನು ಅನಧಿಕೃತವಾಗಿ ವರ್ಗಾಯಿಸಿದ ಪ್ರಕರಣದ ವಿಚಾರಣೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿ ಕೃಷ್ಣ ಎ. ಶೆಟ್ಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ಕೆ.ವಿ.ಅರವಿಂದ್ ಅವರ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿತು.
ಈ ಕುರಿತು ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಲಾಗದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿ ವಜಾ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಉಮಿಕಲ್ ಬೆಟ್ಟದ ಮೇಲ್ಭಾಗದಲ್ಲಿ ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪನೆ ಮಾಡಲು ಯಾವುದೇ ಕಾರ್ಯಾದೇಶವಿಲ್ಲದೆ ಗುತ್ತಿಗೆದಾರನಿಗೆ 1.21 ಕೋಟಿ ರೂ. ಹಣವನ್ನು ಸರ್ಕಾರಿ ಅಧಿಕಾರಿಗಳು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಆದರೆ, ಪರಶುರಾಮನ ಪ್ರತಿಮೆ ಅನಾವರಣ ನಂತರದ ಕೆಲವೇ ದಿನಗಳಲ್ಲಿ ಪ್ರತಿಮೆಯನ್ನು ಫೈಬರ್‌ನಿಂದ ಮಾಡಿರುವ ವಿಚಾರ ಬಹಿರಂಗವಾಯಿತು. ಅಲ್ಲದೆ, ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲೂ ಕಳಪೆ ಕಾಮಗಾರಿ ನಡೆದಿರುವುದು ಕಂಡುಬಂದಿತ್ತು. ಗುತ್ತಿಗೆದಾರ ಜಿಎಸ್‌ಟಿ ಪಾವತಿಯಲ್ಲಿ ವಂಚನೆ ಮಾಡಿದ್ದಾನೆ. ಆದ್ದರಿಂದ ಪ್ರಕರಣ ಕುರಿತು ವಿಚಾರಣೆ ನಡೆಸಲು ಸರ್ಕಾರಕ್ಕೆ ಆದೇಶಿಸಬೇಕು ಎಂದು ನ್ಯಾಯಪೀಠಕ್ಕೆ ಅರ್ಜಿದಾರರು ಕೋರಿದ್ದರು.
ಇದನ್ನೂ ಓದಿ: 72 ಲಕ್ಷ ಹಣ ದುರ್ಬಳಕೆ: ಇನ್ಸ್ಪೆಕ್ಟರ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಿರಾಕರಣೆ - High Court