ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವುದು ಮತ್ತು ಈ ಸಂಬಂಧ ದಾಖಲಿಸಿದ್ದ ಮತ್ತೊಂದು ದೂರನ್ನು ಪರಿಗಣಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿತು. ಈಗಾಗಲೇ ಪ್ರಕರಣದ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ ರಚಿದೆ. ತಮ್ಮ ಮನವಿ ಏನೇ ಇದ್ದರೂ ಎಸ್‌ಐಟಿ ಮುಂದೆ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಅರ್ಜಿದಾರರಿಗೆ ಸೂಚಿಸಿದೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಈ ಅರ್ಜಿ ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪ್ರಯತ್ನಿಸಲಾಗಿತ್ತು. ಈ ವೇಳೆ ಪೊಲೀಸರು, ಪ್ರಕರಣ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ಮತ್ತೊಂದು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಹಿಂಬರಹ ಬರೆದುಕೊಟ್ಟಿದ್ದರು. ಆ ಹಿಂಬರಹ ರದ್ದುಪಡಿಸಿ ಎಫ್‌ಐಆರ್ ದಾಖಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಬೇಕು. ವಿಡಿಯೋ ಮಾಡಿರುವವರು ಮತ್ತು ವಿಡಿಯೋವನ್ನು ಇತರರಿಗೆ ಹಂಚಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೂರ್ಣ ಪ್ರಕರಣದ ನ್ಯಾಯಾಂಗ ತನಿಖೆ ಸೇರಿದಂತೆ ಸ್ವತಂತ್ರ ತನಿಖಾ ಸಂಸ್ಥೆಗಳಿಗೆ ವಹಿಸಬೇಕು ಎಂದು ಹೈಕೋರ್ಟ್ಗೆ ಸಲ್ಲಿಸಿ ಅರ್ಜಿಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ವಾದಿಸಲು ನೇಮಕವಾಗಿದ್ದ ಹಿರಿಯ ವಕೀಲೆ ರಾಜೀನಾಮೆ!