ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗೆ ಹಾಜರಾಗಲು ಈ ಹಿಂದೆ ನೀಡಿದ್ದ ವಿನಾಯ್ತಿಯನ್ನು ಹೈಕೋರ್ಟ್ ವಿಸ್ತರಿಸಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು, ''ಅರ್ಜಿ ತಿದ್ದುಪಡಿಗಾಗಿ ಮನವಿ ಮಾಡಲಾಗಿದೆ. ಸರ್ಕಾರದಿಂದ ಇದಕ್ಕೆ ಆಕ್ಷೇಪ ಇಲ್ಲದಿದ್ದಲ್ಲಿ ಕಾಲಾವಕಾಶ ನೀಡಬೇಕು'' ಎಂದು ಕೋರಿದರು.
ಇದಕ್ಕೆ ಪೀಠ, ''ಸರ್ಕಾರದ ಪರ ವಕೀಲರನ್ನು ಅರ್ಜಿ ತಿದ್ದುಪಡಿಗೆ ಆಕ್ಷೇಪ ಇಲ್ಲವೇ'' ಎಂದು ಪ್ರಶ್ನಿಸಿತು. ಇದಕ್ಕೆ ಸರ್ಕಾರದ ವಕೀಲರು, ''ಆಕ್ಷೇಪಣೆ ಇಲ್ಲ'' ಎಂದು ಹೇಳಿದರು.
ಇದೇ ವೇಳೆ ಯಡಿಯೂರಪ್ಪರವನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಕೋರಿ ಸಂತ್ರಸ್ತೆಯ ಪರ ವಕೀಲರು, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು.
ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.