ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಕೆ.ಆರ್.ನಗರದ ಮಹಿಳೆಯನ್ನು ಅಪಹರಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ನಿಗದಿಪಡಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕ್ರಿಯೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಫೆ.7ರವರೆಗೆ ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಮನವಿ ಒಪ್ಪಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿ, ಹಿಂದಿನ ಮಧ್ಯಂತರ ಆದೇಶವನ್ನು ವಿಸ್ತರಿಸಿತು.
ಪ್ರಕರಣದ ಹಿನ್ನೆಲೆ: ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತೆಯ ಮಗ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿತ್ತು. ನಮ್ಮ ತಾಯಿ (ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ) ರೇವಣ್ಣ ಅವರ ಮನೆಯಲ್ಲಿ ಸುಮಾರು 6 ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದರು. ಪ್ರಜ್ವಲ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಾಬಣ್ಣ ಎಂಬವರು ರೇವಣ್ಣ ಅವರ ಸೂಚನೆ ಮೇರೆಗೆ ಅಪಹರಣ ಮಾಡಿದ್ದರು. ಅಲ್ಲದೇ ಪ್ರಜ್ವಲ್ ರೇವಣ್ಣ ಅವರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಸಂಬಂಧ ತಾಯಿಯ ಕೆಲವು ವಿಡಿಯೋಗಳಲ್ಲಿ ವೈರಲ್ ಆಗಿರುವುದಾಗಿ ಸ್ನೇಹಿತರು ತಿಳಿಸಿದ್ದರು. ತಕ್ಷಣ ಬಾಬಣ್ಣ ಅವರಿಗೆ ಮನವಿ ಮಾಡಿ ತನ್ನ ತಾಯಿಯನ್ನು ವಾಪಸ್ ಕಳುಹಿಸುವಂತೆ ಮನವಿ ಮಾಡಲಾಗಿತ್ತು. ಆದರೆ, ಕಳುಹಿಸಿರಲಿಲ್ಲ ಎಂದು ಆರೋಪಿಸಿ 2024ರ ಮೇ 2 ರಂದು ಕೆ.ಆರ್.ನಗರದ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದರು.
ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ರೇವಣ್ಣ ಅವರಿಗೆ 2024ರ ಮೇ 13ರಂದು ಜಾಮೀನು ಮಂಜೂರು ಮಾಡಿತ್ತು. ಜಾಮೀನು ರದ್ದು ಮಾಡುವಂತೆ ಕೋರಿ ವಿಶೇಷ ತನಿಖಾ ದಳ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿತ್ತು.
ಇದನ್ನೂ ಓದಿ: ಅವಾಚ್ಯ ಪದ ಬಳಕೆ ಆರೋಪ ಪ್ರಕರಣ : ಲಕ್ಷ್ಮೀ ಹೆಬ್ಬಾಳ್ಕರ್ಗೆ ಹೈಕೋರ್ಟ್ ಹ್ಯಾಂಡ್ ಸಮನ್ಸ್