ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗೆ ಹಾಜರಾಗಲು ವಿನಾಯ್ತಿ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಮತ್ತು ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನಿಡಿದೆ.
ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ನ್ಯಾಯಮೂರ್ತಿಗಳು, ಸಂಸದರು ಮತ್ತು ಶಾಸಕರ ವಿರುದ್ಧ ಪ್ರಕರಣಗಳನ್ನು ಮತ್ತೊಂದು ಪೀಠದಲ್ಲಿ ನಿಗದಿಪಡಿಸಲಾಗಿದೆ. ಆದ್ದರಿಂದ ಆ ಪೀಠದಲ್ಲಿಯೇ ನಿಮ್ಮ ಮನವಿಯನ್ನು ಸಲ್ಲಿಸಬಹುದು ಎಂದು ತಿಳಿಸಿದರು. ಅಲ್ಲದೇ, ಈ ಹಿಂದೆ ನೀಡಿದ್ದ ಆದೇಶವನ್ನು ವಿಸ್ತರಿಸಿ ಆದೇಶಿಸಿದರು.
ಪ್ರಕರಣದ ಹಿನ್ನೆಲೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು.
ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಇದನ್ನೂ ಓದಿ: ಬಿಟ್ ಕಾಯಿನ್: ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬುಗೆ ನಿರೀಕ್ಷಣಾ ಜಾಮೀನು ನಿರಾಕರಣೆ - BITCOIN Scam