ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ತಮ್ಮ ಕುಟುಂಬಸ್ಥರಿಗೆ ಕಾನೂನು ಬಾಹಿರವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ಮುಂದುವರೆದ ವಿಚಾರಣೆ ಇಂದು ನಡೆಯಲಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಬೆಳಗ್ಗೆ 12 ಗಂಟೆಗೆ ವಿಚಾರಣೆ ಆರಂಭವಾಗಲಿದೆ. ಈಗಾಗಲೇ ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ.
ಇದೀಗ ಕೊನೆಯ ವಾದವಾಗಿ ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ಪ್ರೊ.ರವಿವರ್ಮಕುಮಾರ್ ಅವರು ವಾದ ಮಂಡಿಸಬೇಕಾಗಿದೆ. ಅರ್ಜಿದಾರರು ಮತ್ತು ಪ್ರತಿವಾದಿಗಳ ಪರವಾಗಿ ಇಂದು ವಾದ ಪೂರ್ಣಗೊಳ್ಳುವ ಸಾಧ್ಯತೆಯಿದ್ದು, ಈ ವಾರವೇ ತೀರ್ಪು ಪ್ರಕಟವಾಗುವ ನಿರೀಕ್ಷೆಯಿದೆ.