ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಪ್ರಕರಣ ಸಂಬಂಧ ಮಾಜಿ ಸಚಿವ ಬಿ. ನಾಗೇಂದ್ರ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ(ಇ.ಡಿ) ಹೈಕೋರ್ಟ್ ಮೆಟ್ಟಿಲೇರಿದೆ.
ನ್ಯಾಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಇ.ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಇ.ಡಿ ಪರ ಹಾಜರಿದ್ದ ಸಹಾಯಕ ಎಸ್.ವಿ.ರಾಜು ಮತ್ತು ಪಿ. ಪ್ರಸನ್ನಕುಮಾರ್, ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ನ್ಯಾಯಪೀಠ, ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದಾಗ ಪ್ರತಿವಾದಿಗಳ (ನಾಗೇಂದ್ರ) ವಾದ ಆಲಿಸದೆ ಆದೇಶ ನೀಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ತುರ್ತು ನೋಟಿಸ್ ಜಾರಿ ಮಾಡುತ್ತಿರುವುದಾಗಿ ತಿಳಿಸಿ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿತು.
ಅರ್ಜಿಯಲ್ಲಿರುವ ಅಂಶಗಳೇನು ? ಈ ಪ್ರಕರಣದಲ್ಲಿ ನಾಗೇಂದ್ರ ಅವರು ಚುನಾವಣೆ ಬಳಕೆಗೆ ಹಣ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಮತ್ತು ಈ ಕುರಿತಂತೆ ಸಾಕಷ್ಟು ಸಾಕ್ಷ್ಯಗಳನ್ನು ತನಿಖೆಯ ವೇಳೆ ಪತ್ತೆ ಮಾಡಲಾಗಿದೆ. ಅಂತೆಯೇ, ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ ಕಲಂ 45ರ ಅನುಸಾರ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ. ಹಾಗಾಗಿ, ಪ್ರಕರಣದ ಪ್ರಮುಖ ಆರೋಪಿಯಾದ ಬಿ. ನಾಗೇಂದ್ರ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿರುವ ಜಾಮೀನು ಆದೇಶವನ್ನು ರದ್ದುಪಡಿಸಬೇಕು ಎಂದು ಇ.ಡಿ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ.
ಪ್ರಕರಣದ ಹಿನ್ನೆಲೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂ.ಗಳ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಹಿಂದುಳಿದ ವರ್ಗಗಳ ಇಲಾಖೆ ಸಚಿವರಾಗಿದ್ದ ಬಿ.ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಇ.ಡಿ ಹೈಕೋರ್ಟ್ ಮೆಟ್ಟಿಲೇರಿದೆ.
ಇದನ್ನೂ ಓದಿ: ಕಟ್ಟಡ ಕುಸಿತ: ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ