ಬೆಂಗಳೂರು: ನಿಷ್ಪಕ್ಷಪಾತ ಚುನಾವಣೆ ನಡೆಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ನಟ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ಟಿ.ಜಿ. ಶಿವಶಂಕರೇಗೌಡ ಅವರಿದ್ದ ನ್ಯಾಯಪೀಠ, ಕೇಂದ್ರ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 2023 ರ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷ ನೀಡಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಆದ್ದರಿಂದ ಮುಂದಿನ ಚುನಾವಣೆಗಳು ನಿಷ್ಪಕ್ಷಪಾತವಾಗಿ ನಡೆಯುವುದು ಸಾಧ್ಯವಿಲ್ಲ. ಆದ್ದರಿಂದ ಇದಕ್ಕೆ ಕಡಿವಾಣ ಹಾಕಬೇಕು. ಮುಂದಿನ ದಿನಗಳಲ್ಲಿ ಕರ್ನಾಟಕ ಮಾಡೆಲ್ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿದರು.
ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ, ವಿಚಾರಣೆ ಮುಂದೂಡಿದೆ.
ಇದನ್ನೂ ಓದಿ: 27 ವರ್ಷದ ಬಳಿಕ ಕರ್ನಾಟಕ ಹೈಕೋರ್ಟ್‌ಗೆ ಕನ್ನಡಿಗ ಮುಖ್ಯ ನ್ಯಾಯಮೂರ್ತಿ