ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ)ಯ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ಮಾರ್ಗಸೂಚಿಗಳಲ್ಲಿ ಮಾರ್ಪಾಡು ಮಾಡುವ ಸಂಬಂಧ, ನ್ಯಾಯಾಲಯದ ಆದೇಶ ಪಾಲಿಸದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಪ್ರೋ ಕೃಷ್ಣಯ್ಯ ಪಿ. ಶ್ರೀನಾಥ್ ಎಂಬುವರು ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂನ್ 11ಕ್ಕೆ ಮುಂದೂಡಿದೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯ ಪ್ರಕ್ರಿಯೆಯನ್ನು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿ 2023 ನವೆಂಬರ್ 29ರಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಾಂತ್ ವಿ. ತಿಮ್ಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿತ್ತು. ಆದರೆ, ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವ ಸಂಬಂಧ ಸರ್ಕಾರ ರೂಪಿಸಿದ್ದ ಮಾರ್ಗಸೂಚಿಗಳ ವಿಭಾಗ 7, 10 ಮತ್ತು 11ರಲ್ಲಿ ಮಾರ್ಪಾಡುಗಳನ್ನು ಮೂರು ತಿಂಗಳಲ್ಲಿ ತರುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಆದರೆ, ಮೂರು ತಿಂಗಳು ಕಳೆದರೂ ಸರ್ಕಾರ ಇಲ್ಲಿತನಕ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಮೂಲಕ ಹೈಕೋರ್ಟ್ ಆದೇಶ ಉಲ್ಲಂಘಿಸಲಾಗಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಇದನ್ನೂ ಓದಿ: ಅನಿರ್ಬಂಧಿತ ವಿದ್ಯುತ್ ಪೂರೈಕೆ ಕೋರಿದ್ದ ಅರ್ಜಿ: ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಅಂತಿಮ ಅವಕಾಶ - High Court