ಬೆಂಗಳೂರು : ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ವಕೀಲ ವಿ. ಆರ್ ರಘನಾಥನ್ ಎಂಬುವವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ ಅರವಿಂದ್ ಅವರ ವಿಭಾಗೀಯ ಪೀಠ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಕೆಲವು ತಿಂಗಳಿಂದ ಒಂದಿಷ್ಟು ಹುದ್ದೆ ಭರ್ತಿಯಾಗದೆ ಖಾಲಿ ಉಳಿದಿದೆ. ಆದಷ್ಟು ಬೇಗ ಖಾಲಿ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಜತೆಗೆ ಮುಂದಿನ ಆದೇಶದವರೆಗೆ ಈವರೆಗೂ ಕಾರ್ಯನಿರ್ವಹಿಸುತ್ತಿರುವ ಅಧ್ಯಕ್ಷರು ಹಾಗೂ ಸದಸ್ಯರು ಸೇವೆಯಲ್ಲಿ ಮುಂದುವರಿಯುವಂತೆ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ ಪ್ರಕರಣ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಮಧ್ಯಂತರ ಆದೇಶ ನೀಡಲು ನಿರಾಕರಿಸಿ ವಿಚಾರಣೆಯನ್ನು ಜು. 5ಕ್ಕೆ ಮುಂದೂಡಿದೆ.
ಅರ್ಜಿಯಲ್ಲಿ ಏನಿದೆ? : ಅರ್ಜಿದಾರರು ತಾನು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದು, ಕೆಲವು ತಿಂಗಳಿಂದ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಒಂದಿಷ್ಟು ಹುದ್ದೆಗಳು ಭರ್ತಿಯಾಗದೇ ಖಾಲಿ ಉಳಿದಿದ್ದು, ತ್ವರಿತಗತಿಯಲ್ಲಿ ಗ್ರಾಹಕರಿಗೆ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ.
ಒಂದೆಡೆ ಪ್ರಕರಣಗಳು ಹೆಚ್ಚುತ್ತಿದೆ. ಇನ್ನೊಂಡೆಡೆ ಖಾಲಿ ಇರುವ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಕರ್ನಾಟಕ ರಾಜ್ಯ ಗ್ರಾಹಕರ ಪರಿಹಾರ ಆಯೋಗ ಅಧ್ಯಕ್ಷರ ( ಕೆಎಸ್‌ಸಿಡಿಆರ್‌ಸಿಯ) ಅವಧಿ ಮೇ 17 ಮುಕ್ತಾಯಗೊಂಡಿದೆ. ಇದುವರೆಗೂ ಆ ಹುದ್ದೆಗೆ ಬೇರೆ ಅಭ್ಯರ್ಥಿಯನ್ನು ನೇಮಿಸಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮನವಿ ಮಾಡಿದ್ದಾರೆ.