ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿ ಮಾಫಿ ಸಾಕ್ಷಿಯಾಗಿರುವುದನ್ನು ಪರಿಗಣಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.
ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕರೂ ಆದ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳು ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಪ್ರಕಟಿಸಿತು.
''ಮಾಫಿ ಸಾಕ್ಷಿಯನ್ನಾಗಿಸಿ, ಸಾಕ್ಷಿ ವಿಚಾರಣೆ ನಡೆಸಲು ಮೊದಲಿಗೆ ಪಾಟಿ ಸವಾಲು ನಡೆಸಬೇಕು. ಹಾಗಾಗಿ, ಈ ಪ್ರಕರಣದಲ್ಲಿ ಆರೋಪಿಯನ್ನು ಮಾಫಿ ಸಾಕ್ಷಿಯನ್ನಾಗಿಸುವುದಕ್ಕೂ ಮೊದಲೇ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಮ್ಯಾಜಿಸ್ಟ್ರೇಟ್ ಮುಂದೆ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಿಕೊಂಡಿರುವುದು ಕಾನೂನುಬಾಹಿರ'' ಎಂದು ನ್ಯಾಯಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೇಶ್ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಇದನ್ನೂ ಓದಿ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿದ ಹೈಕೋರ್ಟ್