ಬೆಂಗಳೂರು: ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ಕಳೆದ ನಾಲ್ಕು ವರ್ಷದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಈವರೆಗೂ ಪ್ರಕ್ರಿಯೆ ಪ್ರರಂಭಿಸದ ಕುರಿತಂತೆ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ತಿಳಿಸಿದೆ.
ರಾಜ್ಯ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಏಕವ್ಯಕ್ತಿ ಆಯೋಗ ರಚಿಸಿ 2023ರ ಆಗಸ್ಟ್ 5ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮೆರ್ಸಸ್ ನಿಕ್ಷೇಪ್ ಇನ್ಫ್ರಾಪ್ರಾಜೆಕ್ಟ್ಸ್ ಸೇರಿದಂತೆ ಹಲವು ಗುತ್ತಿಗೆ ಕಂಪನಿಗಳು ಮತ್ತು ಗುತ್ತಿಗೆದಾರರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಿತು. ಈ ಕುರಿತು ಸೂಕ್ತ ಆದೇಶ ಮಾಡಲಾಗುವುದು ಎಂದು ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಸಿದೆ.
ಅಲ್ಲದೆ, ಮುಂದಿನ ವಿಚಾರಣೆ ವೇಳೆ ಒಂದೊಮ್ಮೆ ಪ್ರಕ್ರಿಯೆ ನಡೆಯದಿರುವುದನ್ನು ಸಮರ್ಥನೆ ಮಾಡದಿದ್ದರೆ ಅರ್ಜಿದಾರರ ಕೋರಿಕೆಯಂತೆ ಸೂಕ್ತ ಆದೇಶ ನೀಡಲಾಗುವುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. 2023ರ ಆಗಸ್ಟ್ 25 ರಿಂದ ಯಾವುದೇ ಪ್ರಕ್ರಿಯೆ ನಡೆಯದಿರುವುದು ಮತ್ತು 2023ರ ಡಿಸೆಂಬರ್ 13ರ ಆದೇಶದ ನಂತರವೂ ಏನೂ ಬೆಳವಣಿಗೆಯಾಗದಿರುವುದನ್ನು ಗಮನಿಸಿದರೆ ಮೇಲ್ನೋಟಕ್ಕೆ ಅರ್ಜಿದಾರರ ವಾದ ಸರಿಯಾಗಿದೆ. ಸಂಬಂಧಿತ ಎಲ್ಲ ಪಾಲುದಾರರ ವಾದ ಆಲಿಸಿದ ಬಳಿಕ ಅವರು ಸಲ್ಲಿಸುವ ದಾಖಲೆಗಳನ್ನು ಪರಿಗಣಿಸಲು ನ್ಯಾಯಾಲಯವು ಆಯೋಗಕ್ಕೆ 45 ದಿನಗಳ ಸಮಯ ನೀಡಿತ್ತು.
ಪ್ರಕರಣದ ಹಿನ್ನೆಲೆ ಏನು? ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಏಕ ಸದಸ್ಯ ಸಮಿತಿ ರಚಿಸಿರುವ 2023ರ ಆಗಸ್ಟ್ 5ರ ಆದೇಶ ರದ್ದು ಪಡಿಸಬೇಕು ಎಂಬುದು ಅರ್ಜಿದಾರರ ಕೋರಿ ಅರ್ಜಿ ಸಲ್ಲಿಸಿದ್ದರು. 45 ದಿನ ಸಮಯ ನೀಡಿದರೂ ಒಂದೇ ಒಂದು ಪ್ರಕ್ರಿಯೆ ಪ್ರಾರಂಭವಾಗಿಲ್ಲ. ಒಂದೇ ಒಂದು ದಾಖಲೆಯನ್ನೂ ಆಯೋಗಕ್ಕೆ ಸಲ್ಲಿಸಲಾಗಿಲ್ಲ. 2023ರ ಜುಲೈ 07 ರಂದು ಮಧ್ಯಂತರ ಆದೇಶ ಮಾಡಿದಾಗ ಈ ನಿರ್ದಿಷ್ಟ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. 2023ರ ಆಗಸ್ಟ್ 25 ರಂದು ನ್ಯಾ. ನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದಾಗಿನಿಂದ ಒಂದೇ ಒಂದು ಹಾಳೆಯನ್ನು ಅಲುಗಾಡಿಸಲಾಗಿಲ್ಲ ಎಂದು ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ. ಗುತ್ತಿಗೆದಾರರಿಗೆ ಹಣ ಪಾವತಿಸುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ಆಯೋಗ ರಚಿಸಿದೆ ಎಂದು ದೂರಿದ್ದರು.
ಇದನ್ನೂ ಓದಿ: ಬೆಂಗಳೂರು: ಪಾದಚಾರಿ ಮಾರ್ಗಗಳಲ್ಲಿ ದೀರ್ಘಕಾಲ ನಿಲ್ಲಿಸಿದ ವಾಹನಗಳ ಹರಾಜಿಗೆ ಹೈಕೋರ್ಟ್ ಸೂಚನೆ