ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಸಂಬಂಧ ಅವರ ಪತ್ನಿ ನಿಕಿತಾ ಸಿಂಘಾನಿಯ ಮತ್ತಿತರರ ವಿರುದ್ಧ ದಾಖಲಿಸಿರುವ ದೂರು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ, ಅರ್ಜಿದಾರರ ವಿರುದ್ಧ ದಾಖಲಿಸಿರುವ ದೂರು ಸಮರ್ಥನೀಯವಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಂಶಗಳಿವೆ ಎಂದು ತಿಳಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿದೆ.
ಮಾರತ್ತಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಮತ್ತು ಏಕ ಉದ್ದೇಶದಿಂದ ಅನೇಕ ಮಂದಿ ಕ್ರಿಮಿನಲ್ ಕೃತ್ಯದಲ್ಲಿ ತೊಡಗಿರುವ ಆರೋಪದ ಮೇಲೆ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ, ಬಾಮೈದ ಅನುರಾಗ್ ಸಿಂಘಾನಿಯ ಹಾಗೂ ಸುಶೀಲ್ ಸಿಂಘಾನಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ, ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಚಾರಣಾಧೀನ ನ್ಯಾಯಾಲಯವು ಕಳೆದ ಶನಿವಾರ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಆತ್ಮಹತ್ಯೆ ಪ್ರಚೋದನೆಯಡಿ ಪ್ರಕರಣ ದಾಖಲಿಸಲು ಯಾವುದೇ ಅಂಶಗಳು ಇಲ್ಲ. ಆರೋಪಿಗಳನ್ನು ಬಂಧಿಸುವುದಕ್ಕೆ ಆಧಾರಗಳನ್ನೂ ಪೊಲೀಸರು ನೀಡಿಲ್ಲ. ಹೀಗಾಗಿ, ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು.
ಎಫ್‌ಐಆರ್ ಓದಿದರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಎಲ್ಲ ಅಂಶಗಳು ಸ್ಪಷ್ಟವಾಗಿವೆ. ನನ್ನ ಪ್ರಕಾರ ಎಲ್ಲಾ ವಿವರಗಳನ್ನು ನೀಡಲಾಗಿದೆ. ಎಫ್‌ಐಆರ್‌ನಲ್ಲಿ ಇದಕ್ಕಿಂತ ಇನ್ನೂ ಹೆಚ್ಚಿನದನ್ನು ಏನು ಕೊಡಲಾಗುತ್ತದೆ? ಎಂದು ಪೀಠ ಪ್ರಶ್ನಿಸಿತು.
ಅಲ್ಲದೆ, ಈ ಕುರಿತು ತನಿಖೆ ನಡೆಯುತ್ತಿದೆಯೇ? ಏನೆಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ? ಡೆತ್ನೋಟ್, ಆತ್ಮಹತ್ಯೆ ವಿಡಿಯೋ ಸಂಗ್ರಹಿಸಲಾಗಿದೆಯೇ? ಎಂದು ಸರ್ಕಾರಿ ವಕೀಲರಿಗೆ ಪೀಠ ಪ್ರಶ್ನಿಸಿತು. ಈ ವೇಳೆ, ಸರ್ಕಾರಿ ಪರ ವಕೀಲರು ತನಿಖೆ ಪ್ರಗತಿಯಲ್ಲಿದೆ ಎಂದರು. ಆಗ ಪೀಠವು ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಿರುವ ದಾಖಲೆಗಳನ್ನು ಸಲ್ಲಿಸಬೇಕು. ಜೊತೆಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.
- ಕಳೆದ ತಿಂಗಳು ಬೆಂಗಳೂರಿನಲ್ಲಿ 34 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಅತುಲ್ ಅವರು ಸುದೀರ್ಘವಾದ ಮರಣ ಪತ್ರ ಹಾಗೂ ವಿಡಿಯೋ ಮಾಡಿ ಅದರಲ್ಲಿ ಪತ್ನಿ ನಿಖಿತಾ ಸಿಂಘಾನಿಯಾ ಮತ್ತು ಅವರ ಕುಟುಂಬಸ್ಥರು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಖಿತಾ, ನಿಶಾ, ಅನುರಾಗ್ ಸಿಂಘಾನಿಯಾಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಪತ್ನಿ, ಅತ್ತೆ, ಬಾಮೈದನಿಗೆ ಷರತ್ತುಬದ್ಧ ಜಾಮೀನು
ಇದನ್ನೂ ಓದಿ: ಹೆಂಡತಿಯಿಂದ ಕಿರುಕುಳ ಆರೋಪ: ದೆಹಲಿ ಕೆಫೆ ಮಾಲೀಕ ಸಾವಿಗೆ ಶರಣು