ಬೆಂಗಳೂರು: ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಸಂತ್ರಸ್ತೆಯ ಹೇಳಿಕೆಗಳನ್ನು ಕೈಬಿಡಲು ಚಿತ್ರದುರ್ಗದ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಪ್ರಕಟಿಸಿದೆ. ಇನ್ನಷ್ಟೇ ತೀರ್ಪಿನ ವಿಸ್ತೃತ ಪ್ರತಿ ಲಭ್ಯವಾಗಬೇಕಿದೆ.
ಪ್ರಕರಣದ ಸಂತ್ರಸ್ತೆಯರ ಹೇಳಿಕೆಗಳನ್ನು 2024ರ ಜು.1ರಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ದಾಖಲಿಸಿಕೊಂಡಿದೆ. ಹಾಗಾಗಿ, ಸಂತ್ರಸ್ತೆಯ ಹೇಳಿಕೆಯ ಭಾಗವನ್ನು ವಿಚಾರಣಾ ಪ್ರಕ್ರಿಯೆಯಿಂದ ತೆಗೆದುಹಾಕಲು ಸೆಷನ್ಸ್ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸದ್ಯ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರು ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದರು.
ಪ್ರಕರಣದ ಹಿನ್ನೆಲೆ ಏನು?: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳು ಮತ್ತು ಪೋಕ್ಸೋ ಕಾಯ್ದೆ 2012ರ ಸೆಕ್ಷನ್ 5 (ಎಲ್) ಮತ್ತು 6ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಚಿತ್ರದುರ್ಗ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯ ಹಂತದಲ್ಲಿದೆ.
ಇದನ್ನೂ ಓದಿ: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ: ದಂಪತಿ ಸಹಿತ ಮೂವರು ದೋಷಿ, ಸೆ.17ಕ್ಕೆ ಶಿಕ್ಷೆ ಪ್ರಕಟ - Srimati Shetty Murder Case