ಬೆಂಗಳೂರು: ಮುಸ್ಲಿಂ ಮಹಿಳೆಯರ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಆರ್ಎಸ್ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸರ್ಕಾರದ ಪರ ವಾದ ಮಂಡಿಸಲು ವಿಶೇಷ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್(ಬಾಲನ್) ಅವರನ್ನು ನೇಮಿಸಿ ಹೊರಡಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ತಡೆ ನೀಡಿದೆ.
ಬಾಲನ್ ಅವರನ್ನು ನೇಮಿಸಿದ್ದ ಕ್ರಮವನ್ನು ಪ್ರಶ್ನಿಸಿ ಡಾ.ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಶ್ರೀರಂಗಪಟ್ಟಣದಲ್ಲಿ ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಲು ಬಾಲನ್ ಅವರನ್ನು ನೇಮಕ ಮಾಡಿರುವುದು ಕಾನೂನುಬಾಹಿರ ನಿಯಮ. ಇದು ಅಧಿಕಾರದ ವ್ಯಾಪ್ತಿ ಮೀರಿದೆ ಎಂದು ವಿವರಿಸಿದರು.
ಈ ಆದೇಶದಿಂದ ಅರ್ಜಿದಾರರ ವಿರುದ್ಧದ ಪ್ರಕರಣದ ತ್ವರಿತ ವಿಚಾರಣೆಯ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ. ಆದ್ದರಿಂದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ಬಾಲನ್ ಅವರನ್ನು ನೇಮಕ ಮಾಡಿರುವ ಆದೇಶಕ್ಕ ತಡೆ ನೀಡಿತು.
ಪ್ರಕರಣದ ಹಿನ್ನೆಲೆ: ಶ್ರೀರಂಗಪಟ್ಟಣದಲ್ಲಿ 2023ರ ಡಿಸೆಂಬರ್ 24ರಂದು ನಡೆದಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಭಾಕರ ಭಟ್, ತ್ರಿವಳಿ ತಲಾಕ್ ವಿಚಾರವನ್ನು ಪ್ರಸ್ತಾಪಿಸಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಮಹಿಳಾ ಹೋರಾಟಗಾರ್ತಿ ಹುಣಸೂರಿನ ನಜ್ಮಾ ನಝೀರ್ ಎಂಬವರು ನೀಡಿದ್ದ ದೂರಿನನ್ವಯ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬೇರೆ ಧರ್ಮವನ್ನು ಅವಮಾನಿಸಿ, ಧರ್ಮ-ಧರ್ಮಗಳ ಮಧ್ಯೆ ಎತ್ತಿಕಟ್ಟಿ, ಗಲಭೆ, ಮತೀಯ ಸಾವು-ನೋವಿಗೆ ಕಲ್ಲಡ್ಕ ಪ್ರಭಾಕರ್ ಪ್ರಚೋದನೆ ನೀಡಿದ್ದಾರೆಂದು ನಜ್ಮಾ ದೂರಿನಲ್ಲಿ ಆರೋಪಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್ ಪರ ವಾದ ಮಂಡಿಸುವುದಕ್ಕಾಗಿ 2024ರ ಮಾರ್ಚ್ 7ರಂದು ಬಾಲಕೃಷ್ಣನ್(ಬಾಲನ್) ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರ ಡಾ.ಪ್ರಭಾಕರ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು.