ಬೆಂಗಳೂರು: ವಕ್ಫ್ ಆಸ್ತಿ ವಿಚಾರ ಸಂಬಂಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಸಂಬಂಧ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಮತ್ತು ಅದರ ಸಂಬಂಧ ನೀಡಿರುವ ಪೊಲೀಸ್ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ಸಂಬಂಧ ಹಾವೇರಿ ಜಿಲ್ಲೆಯ ಸವಣೂರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ನವೆಂಬರ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೀಡಿರುವ ನೋಟಿಸ್ ರದ್ದುಪಡಿಸಬೇಕು ಎಂದು ಬಸವರಾಜ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿ ಸಂಬಂಧ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಅರ್ಜಿದಾರರು ಯಾವುದೇ ಆಕ್ಷೇಪಾರ್ಹವಾದ ಮಾತುಗಳನ್ನು ಆಡದಿದ್ದರೂ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ'' ಎಂದು ಪೀಠಕ್ಕೆ ತಿಳಿಸಿದರು.
"ನಾವು ಬೇರೊಬ್ಬರ ಪರವಾಗಿ ಮಾತನಾಡಲಾಗದು. ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ ಎಂದು ಹೇಳುತ್ತಿಲ್ಲ. ಆದರೆ, ದೂರಿನಲ್ಲಿನ ಕೊನೆಯ ನಾಲ್ಕು ಸಾಲುಗಳಲ್ಲಿನ ಹೇಳಿಕೆಗಳು ಬೇಕಿರಲಿಲ್ಲ'' ಎಂದು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್.ಜಗದೀಶ್ ಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ಪೀಠವು ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ವಿಧಿಸಲಾಗಿದೆ ಎಂದು ಆದೇಶಿಸಿ, ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ''ಸವಣೂರಿನಲ್ಲಿ ನಿಂತು ಎಲ್ಲೇ ಕಲ್ಲು ಎಸೆದರೂ ಅದು ಬಿದ್ದ ಜಾಗ ವಕ್ಫ್ ಆಸ್ತಿ ಎನ್ನುವಂತಾಗಿದೆ. ಭೋವಿ ಸಮಾಜದವರಿಗೆ ಮನೆ ನಿರ್ಮಾಣ ಮಾಡಬೇಕು ಎಂದು ಮೂರು ವರ್ಷಗಳ ಹಿಂದೆ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ಆ ಜಾಗವನ್ನೂ ವಕ್ಫ್ ಆಸ್ತಿ ಎನ್ನುತ್ತಾರೆ'' ಎಂದು ಬಸವರಾಜ ಬೊಮ್ಮಾಯಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.
ಇದನ್ನೂ ಓದಿ: ಶ್ರೀರಂಗಪಟ್ಟಣ ಮಸೀದಿಯಲ್ಲಿನ ಮದರಸಾ ತೆರವಿಗೆ ಜಿಲ್ಲಾಧಿಕಾರಿಗೆ ಸೂಚಿಸಲು ಕೋರಿದ ಕೇಂದ್ರ ಸರ್ಕಾರ