ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕುರಿತು ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಪ್ರಸಾರ ಮಾಡಲಾಗಿದ್ದ ಆಕ್ಷೇಪಾರ್ಹವಾದ ಅನಿಮೇಟೆಡ್ ವಿಡಿಯೋಗೆ ಆಕ್ಷೇಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧದ ಎಫ್‌ಐಆರ್ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ಸಂಬಂಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಪ್ರಶ್ನಿಸಿ ಬಿ.ವೈ. ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಎಫ್‌ಐಆರ್‌ಗೆ ತಡೆ ನೀಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಪ್ರಕರಣದಲ್ಲಿ ಆಡಳಿತದಲ್ಲಿದ್ದ ರಾಜಕೀಯ ಪಕ್ಷದವನ್ನು ಟೀಕಿಸಿದ್ದು, ಅದು ಅಪರಾಧವಾಗುವುದಿಲ್ಲ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಆರೋಪ ಹೊರಿಸಲಾಗಿದೆ. ಒಂದೇ ಟ್ವೀಟ್‌ಗೆ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಮತ್ತು ಚುನಾವಣಾ ಆಯೋಗ ಎಫ್‌ಐಆರ್ ದಾಖಲಿಸಿದ್ದು, ಇದು ಕಾನೂನುಬಾಹಿರ. ಹೀಗಾಗಿ, ಎಫ್‌ಐಆರ್ ರದ್ದುಗೊಳಿಸಬೇಕು'' ಎಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ, ಎಫ್‌ಐಆರ್‌ಗೆ ತಡೆ ನೀಡಿದೆ. ಅಲ್ಲದೆ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ರಾಹುಲ್ ಗಾಂಧಿ ಮತ್ತು ನರೇಂದ್ರ ಮೋದಿ ಅವರ ಅನಿಮೇಟೆಡ್ ವಿಡಿಯೋ ಪ್ರಕಟಿಸಲಾಗಿತ್ತು. ಅದರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂಯೇತರರ ಆಸ್ತಿಯನ್ನು ಕಿತ್ತು, ಕಾಂಗ್ರೆಸ್ ಮೆಚ್ಚಿನ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತದೆ ಎಂದು ತೋರಿಸಲಾಗಿದೆ. ಅಲ್ಲದೇ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಸಂಪನ್ಮೂಲದಲ್ಲಿ ಮುಸ್ಲಿಂರಿಗೆ ಮೊದಲ ಆದ್ಯತೆ ನೀಡಬೇಕು ಎಂದಿದ್ದರು ಎಂದು ವಿಡಿಯೋ ತುಣಕಿನಲ್ಲಿದೆ ಎಂದು ದೂರಲಾಗಿತ್ತು. ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಇದೀಗ ಬಿ.ವೈ. ವಿಜಯೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ - High Court