ಬೆಂಗಳೂರು: ಮೈಸೂರಿನಲ್ಲಿ ಕಳೆದ ವರ್ಷ ಹಮ್ಮಿಕೊಂಡಿದ್ದ ರಾಜ್ಯ ವಕೀಲರ ಸಮ್ಮೇಳನದ ವೇಳೆ ಹಣದ ದುರ್ಬಳಕೆ ಆರೋಪಿಸಿರುವುದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ರಾಜ್ಯ ವಕೀಲರ ಪರಿಷತ್ (ಕೆಎಸ್‌ಬಿಸಿ) ಅಧ್ಯಕ್ಷರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಅಲ್ಲದೆ, ಇದೇ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಭಾರತೀಯ ವಕೀಲರ ಪರಿಷತ್ (ಬಿಸಿಐ) ರಚಿಸಿರುವ ಮೂವರು ಸದಸ್ಯರ ಸಮಿತಿಗೆ ಮತ್ತೊಂದು ಪೀಠ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ದದ ತನಿಖೆ ವಜಾ ಮಾಡುವಂತೆ ಕೋರಿ ಕೆಎಸ್‌ಬಿಸಿ ಅಧ್ಯಕ್ಷ ಎಚ್. ಎಲ್. ವಿಶಾಲ್ ರಘು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ನಡೆಸಿತು.
ದೂರಿನ ವಿವರ: ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ 2023ರ ಆಗಸ್ಟ್ 12 ಮತ್ತು 13ರಂದು ಎರಡು ದಿನಗಳ ಕಾಲ ರಾಜ್ಯ ವಕೀಲರ ಸಮ್ಮೇಳನ ಆಯೋಜಿಸಿತ್ತು. ಈ ಸಮಯದಲ್ಲಿ ಸಮ್ಮೇಳನದ ಪ್ರತಿನಿಧಿ ವಕೀಲರಿಂದ ತಲಾ ₹1 ಸಾವಿರದಂತೆ ಒಟ್ಟು 1,16,33,000 ರೂ. ಮೊತ್ತವನ್ನು ದೇಣಿಗೆಯಾಗಿ ಸಂಗ್ರಹಿಸಲಾಗಿತ್ತು. ರಾಜ್ಯ ಸರ್ಕಾರ 1.8 ಲಕ್ಷ ರೂ. ಅನುದಾನ ನೀಡಿತ್ತು. ಮತ್ತು ರಾಜ್ಯ ವಕೀಲರ ಪರಿಷತ್ನಿಂದ 75 ಲಕ್ಷ ರೂ. ಬಿಡುಗಡೆಯಾಗಿತ್ತು. ಒಟ್ಟು ಮೊತ್ತ 3,30,33,000 ರೂ. ಸಂಗ್ರಹವಾಗಿತ್ತು. ಈ ಹಣ ಪರಿಷತ್ನ ಬ್ಯಾಂಕ್ ಖಾತೆಗೆ ಜಮೆ ಆಗಿದ್ದು, ಈ ಹಣದ ಬಳಕೆಯಲ್ಲಿ ದುರುಪಯೋಗ ನಡೆದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಅಧ್ಯಕ್ಷರು ಮತ್ತು ಇತರರು ಸೇರಿಕೊಂಡು ಪರಿಷತ್ನ 50 ಲಕ್ಷ ರೂ. ಮೊತ್ತವನ್ನು ಬ್ಯಾಂಕ್ನಿಂದ ನಗದೀಕರಿಸಿಕೊಂಡಿದ್ದಾರೆ. ಸುಳ್ಳು ಲೆಕ್ಕಪತ್ರ ಸೃಷ್ಟಿಸಿ, ವಕೀಲರ ಸಮುದಾಯಕ್ಕೆ ಸೇರಿದ ಕೋಟ್ಯಂತರ ರೂಪಾಯಿಯನ್ನು, ನಕಲಿ ಬಿಲ್ ತಯಾರಿಸಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಸರ್ಕಾರಕ್ಕೆ ಸಲ್ಲಿಸಬೇಕಾದ ಜಿಎಸ್ಟಿ ಹಣವನ್ನು ಸಲ್ಲಿಸದೇ ಮೋಸ ಮಾಡುವ ಉದ್ದೇಶದಿಂದ ಪರಿಷತ್ನ ಸಮುದಾಯಕ್ಕೆ ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಮೂವರು ಸದಸ್ಯರ ಸಮಿತಿ ತಡೆ: ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವೀಕರಿಸಿದ ದೂರಿನ ತನಿಖೆಗಾಗಿ ಮೂವರು ಸದಸ್ಯರ ಸಮಿತಿ ರಚಿಸಿ ಬಿಸಿಐ ಮಾಡಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ವಿಧಿಸಿದೆ. ಹಿರಿಯ ವಕೀಲ ಎಸ್. ಬಸವರಾಜು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಏಪ್ರಿಲ್ 12ರಂದು ಬಿಸಿಐ ಪ್ರಕರಣದ ತನಿಖೆಗಾಗಿ ಮೂವರು ಸಮಿತಿ ರಚಿಸಿ ಆದೇಶಿಸಿರುವುದು ಮತ್ತು ಮುಂದಿನ ಪ್ರಕ್ರಿಯೆಗೆ ತಡೆ ವಿಧಿಸಿದೆ. ಅಲ್ಲದೇ ಪ್ರತಿವಾದಿಗಳಾದ ಬಿಸಿಐ, ಕೆಎಸ್‌ಬಿಸಿ ಅಧ್ಯಕ್ಷ ಎಚ್. ಎಲ್. ವಿಶಾಲ್ ರಘು ಮತ್ತು ಉಪಾಧ್ಯಕ್ಷ ವಿನಯ್ ಮಂಗಳೇಕರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ: ನಾಡಗೀತೆ ಹಾಡುವ ಕುರಿತ ಗೊಂದಲ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - High Court Judgment