ಬೆಂಗಳೂರು: ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.
ಅಲ್ಲದೇ, ಪ್ರಕರಣ ಸಂಬಂಧ ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ಅದರ ಸಂಬಂಧ ವಿಜಯಪುರ 1ನೇ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ನ ಮುಂದಿನ ವಿಚಾರಣೆವರೆಗೆ ತಡೆ ನೀಡಿತು. ಜೊತೆಗೆ, ಗಾಂಧಿ ಚೌಕ್ ಪೊಲೀಸ್ ಠಾಣೆ ಹಾಗೂ ದೂರುದಾರ ಅಬೂಬಕರ್ ರಾಜೇಸಾಬ್ ಕಂಬಾಗಿ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ, ಅರ್ಜಿದಾರ ಬಸನಗೌಡ ಪಾಟೀಲ್ ಯತ್ನಾಳ್ ಪರ ವಾದ ಮಂಡಿಸಿದ ವಕೀಲ ವೆಂಕಟೇಶ ದಳವಾಯಿ, ''ದೂರಿನಲ್ಲಿ ಆರೋಪಿಸಿರುವಂತೆ ಅರ್ಜಿದಾರರ ಭಾಷಣ ಕೋಮುಗಲಭೆ ಪ್ರಚೋದನೆ ಆಗಲ್ಲ. ಏಕೆಂದರೆ, ಅವರ ಭಾಷಣದ ಬಳಿಕ ಯಾವುದೇ ಘಟನೆ ನಡೆದಿಲ್ಲ. ಅದೇ ರೀತಿ ಇತ್ತಿಚಿನ ಸುಪ್ರೀಂಕೋರ್ಟ್ ಆದೇಶದ ಅನ್ವಯ ಪ್ರಕರಣ ನಿಲ್ಲುವುದಿಲ್ಲ. ಆದ್ದರಿಂದ ಎಫ್‌ಐಆರ್ ರದ್ದುಪಡಿಸಬೇಕು'' ಎಂದು ಮನವಿ ಮಾಡಿದರು. ಅಲ್ಲದೇ, ''ಮುಂದಿನ ವಿಚಾರಣೆವರೆಗೆ ಪ್ರಕರಣಕ್ಕೆ ತಡೆ ನೀಡಬೇಕು'' ಎಂದು ಕೋರಿದರು.
ವಿಜಯಪುರ ನಗರದಲ್ಲಿ ಮಾರ್ಚ್ 3 ರಂದು ಆಯೋಜಿಸಲಾಗಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಆಂಧ್ರಪ್ರದೇಶದ ಗೋಶಾಮಹಾಲ ಶಾಸಕ ರಾಜಾಸಿಂಗ್ ಲೋಧಾ ಭಾಗವಹಿಸಿದ್ದರು. ವೇದಿಕೆಯಲ್ಲಿ ಭಾಷಣ ಮಾಡುವಾಗ ಇಬ್ಬರೂ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ. ಅವರಿಬ್ಬರ ಭಾಷಣ ಸಮಾಜದಲ್ಲಿ ಎರಡು ಸಮುದಾಯಗಳ ನಡುವೆ ವೈಷಮ್ಯ ಹುಟ್ಟುಹಾಕುವ, ಕೋಮುಗಲಭೆಗೆ ಪ್ರಚೋದನೆ ನೀಡುವುದಾಗಿತ್ತು ಎಂದು ಸ್ಥಳೀಯ ನಿವಾಸಿ ಅಬೂಬಕರ್ ರಾಜೇಸಾಬ್ ಕಂಬಾಗಿ ದೂರು ನೀಡಿದ್ದರು.
ಅದನ್ನು ಆಧರಿಸಿ ಗಾಂಧಿಚೌಕ್ ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಅದರ ವಿಚಾರಣೆ 1ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಮಧ್ಯೆ ತಮ್ಮ ವಿರುದ್ಧದ ಪ್ರಕರಣ ರದ್ದು ಮಾಡಲು ಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ: ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು