ಐದು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾಗಿ ಹೆಚ್ ಎಂ ರೇವಣ್ಣ ಆಯ್ಕೆ; ನಿಗಮ ಮಂಡಳಿಗೆ 45 ಕೈ ಮುಖಂಡರ ನೇಮಕಕ್ಕೆ ಸಿಎಂ ಅಸ್ತು - ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರಾಗಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರನ್ನು ನೇಮಕ ಮಾಡಲಾಗಿದೆ.


Published : Feb 28, 2024, 10:53 PM IST
|Updated : Feb 29, 2024, 1:33 PM IST
ಬೆಂಗಳೂರು: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹೆಚ್.ಎಂ.ರೇವಣ್ಣನ ಅವರನ್ನು ಸಿಎಂ ಸಿದ್ದರಾಮಯ್ಯ ನೇಮಕ ಮಾಡಿದ್ದಾರೆ.
ಸಿದ್ದರಾಮಯ್ಯರ ಆಪ್ತರಾಗಿರುವ ಹೆಚ್.ಎಂ.ರೇವಣ್ಣನಗೆ ಸರಕಾರದಲ್ಲಿ ಎಲ್ಲಾ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮುಖ್ಯಸ್ಥರ ಜವಾಬ್ದಾರಿ ನೀಡಿದ್ದಾರೆ. ಅಷ್ಟೇ ಅಲ್ಲ, ಕ್ಯಾಬಿನೆಟ್ ದರ್ಜೆ ಸ್ಥಾನಮಾನದ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ ಮತ್ತು ಯುವ ನಿಧಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳು ಅನುಷ್ಠಾನ ಸಮಿತಿ ರಚನೆ ಮಾಡಿದ್ದಾರೆ.
ಸಮಿತಿಯ ಉಪಾಧ್ಯಕ್ಷರಾಗಿ ಮೆಹರೂಜ್ ಖಾನ್, ಪುಷ್ಪ ಅಮರನಾಥ್, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರನ್ನು ನೇಮಿಸಲಾಗಿದೆ.
ನಿಗಮ ಮಂಡಳಿಗೆ ಕಾರ್ಯಕರ್ತರ ನೇಮಕ: ರಾಜ್ಯ ಸರಕಾರದ ವಿವಿಧ ಇಲಾಖೆಗಳ ವ್ಯಾಪ್ತಿಗೆ ಒಳಪಡುವ ನಿಗಮ ಮಂಡಳಿಗಳಿಗೆ ಕಾಂಗ್ರೆಸ್ ಪಕ್ಷದ 45 ಜನ ಮುಖಂಡರು ಮತ್ತು ಕಾರ್ಯಕರ್ತರನ್ನು ನೇಮಕ ಮಾಡಲು ಸಿಎಂ ಅನುಮೋದನೆ ನೀಡಿದ್ದಾರೆ. ಇತ್ತೀಚೆಗಷ್ಟೆ 35ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಪಕ್ಷದ ಶಾಸಕರನ್ನು ನೇಮಕ ಮಾಡಿದ್ದ ಮುಖ್ಯಮಂತ್ರಿಗಳು ಈಗ ಉಳಿದ ನಿಗಮ ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನು ನೇಮಿಸಿದ್ದಾರೆ.
ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿದ ವಿವರಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಪಟ್ಟಿಯನ್ನು ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಕಳಿಸಿಕೊಡಲಾಗಿದೆ. ಸಿಎಂ ಅವರ ಶಿಫಾರಸಿನಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ನಾಳೆ ನೇಮಕಾತಿ ಆದೇಶ ಹೊರಡಿಸುವ ಸಾಧ್ಯತೆಗಳಿವೆ.
ಲೋಕಸಭೆ ಚುನಾವಣೆಗಿಂತ ಮೊದಲೇ ನಿಗಮ ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನು ನೇಮಿಸಲು ಉಪ ಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದರು. ಈ ಬಗ್ಗೆ ಸಾಧಕ ಬಾಧಕಗಳ ಕುರಿತು ಸುದೀರ್ಘ ಚರ್ಚೆಯ ಬಳಿಕ ನಿಗಮ ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರ ನೇಮಕಕ್ಕೆ ಸಿಎಂ ಅಸ್ತು ಎಂದಿದ್ದಾರೆ.
ಇದನ್ನೂ ಓದಿ: ರಾಜ್ಯದ ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ! ತಗ್ಗಲಿದೆ ಕರೆಂಟ್ ಬಿಲ್, ಏಪ್ರಿಲ್ 1ರಿಂದ ಜಾರಿ