ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಸಂದೇಶ ಕಳುಹಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ನಗರದ ಮಿಲಿಟರಿ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದರು. ಇದೀಗ ನಗರದ ಪ್ರತಿಷ್ಠಿತ ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ.
ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರುವ ಎಂ ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರುವ ಬಿಎಂಎಸ್ ಕಾಲೇಜು ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆದರಿಕೆ ಇಮೇಲ್ ಬಂದಿದ್ದು, ಕಾಲೇಜು ಸಿಬ್ಬಂದಿ ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಕಾಲೇಜುಗಳಿಗೆ ತೆರಳಿ ಪರಿಶೀಲಿಸಿದ ಬಳಿಕ ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ, "ನಗರದ ಮೂರು ಕಾಲೇಜುಗಳಿಗೆ ಇಮೇಲ್ ಮುಖಾಂತರ ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಾರೆ. ಕೂಡಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಥಳಕ್ಕೆ ಹೋಗಿ ಕೂಲಂಕಶವಾಗಿ ಪರಿಶೀಲಿಸಿದ್ದಾರೆ. ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದರು.
ಇದನ್ನೂ ಓದಿ: ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಹೋಟೆಲ್‌ಗೆ ಹುಸಿ ಬಾಂಬ್ ಬೆದರಿಕೆ - Hoax bomb threat