ರಾಯಚೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನೂ ಸಹ ರಾಯಚೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಸಂಸದ ಬಿ.ವಿ.ನಾಯಕ ಹೇಳಿದರು. ರಾಯಚೂರು ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎನ್ನುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಪಕ್ಷದ ಕೇಂದ್ರ ವರಿಷ್ಠರು ಹಾಗೂ ರಾಜ್ಯ ಮುಖಂಡರನ್ನು ಭೇಟಿ ಮಾಡಿ ಟಿಕೆಟ್ ನೀಡುವ ಮೂಲಕ ನನಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದರು.
ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದೆ. ಆದರೆ ಸೋಲು ಅನುಭವಿಸುವಂತಾಯಿತು. ಆ ಸಂದರ್ಭದಲ್ಲಿ ನರೇಂದ್ರ ಮೋದಿಯವರ ಅಲೆಯಲ್ಲಿ ರಾಜ್ಯದಲ್ಲಿ ಒಂದು ಕ್ಷೇತ್ರ ಹೊರತುಪಡಿಸಿ ಎಲ್ಲೆಡೆ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಪ್ರಸ್ತುತ ವಿದ್ಯಮಾನಗಳಲ್ಲಿ ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅನಿವಾರ್ಯ ಎಂಬ ಪರಿಸ್ಥಿತಿಯಿದೆ.
ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರಲ್ಲಿಯೂ ಬಿಜೆಪಿ ಪರ ಉತ್ಸಾಹ ಇದೆ. ಹೀಗಾಗಿ ಮೂರನೇ ಅವಧಿಗೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ತಡೆಯುವ ಶಕ್ತಿ ಎಲ್ಲೂ ಇಲ್ಲ ಎಂದು ಹೇಳಿದರು.
ಒಂದು ವೇಳೆ ಟಿಕೆಟ್ ದೊರೆಯದಿದ್ದರೆ ಎಂಬ ಪತ್ರಕರ್ತರ ಪ್ರಶ್ನೆಗೆ, ಕಾರ್ಯಕರ್ತರು, ಅಭಿಮಾನಿಗಳ ಒತ್ತಾಯದ ಮೇರೆಗೆ ಅವಕಾಶ ಕೇಳಿದ್ದೇನೆ. ಸಿಗದಿದ್ದರೆ ಪಕ್ಷದ ಕಾರ್ಯಕರ್ತನಾಗಿ ಮುಂದುವರೆಯವೆ ಎಂದು ತಿಳಿಸಿದರು.
ಇದನ್ನೂಓದಿ: ಜಾತಿ ಗಣತಿ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ, ಸಂಪುಟ ಸಭೆ ನಿರ್ಧಾರ ತೆಗೆದುಕೊಳ್ಳುತ್ತದೆ: ಗೃಹ ಸಚಿವ