ತುಮಕೂರು: ನನಗೆ ಕೊಟ್ಟ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ ಎಂದು ಕೇಂದ್ರದ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು. ಸೋಮಣ್ಣ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶಶಿಕುಮಾರ್ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ನನ್ನನ್ನು ಎನ್ಡಿಎ ಸರ್ಕಾರದ ಸಚಿವನನ್ನಾಗಿ ಮಾಡಿದ್ದಾರೆ, ಇದಕ್ಕಾಗಿ ಪ್ರಧಾನಿ, ಗೃಹ ಸಚಿವರು ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ ಎಂದರು.
ಮಧುಗಿರಿಯಲ್ಲಿ ಕಲುಷಿತ ನೀರು ಕುಡಿದು ಸಾವನ್ನಪ್ಪಿದ್ದಾರೆ. ಇದು ನಡೆಯಬಾರದಿತ್ತು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ಜಿಲ್ಲಾಧಿಕಾರಿಯಿಂದ ವರದಿ ಪಡೆಯುತ್ತೇನೆ. ನಾನೂ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುತ್ತೇನೆ ಎಂದು ಹೇಳಿದರು.
ಇತ್ತೀಚಿಗೆ ಪಾವಗಡ ತಾಲೂಕಿನಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದರು. ಅಲ್ಲದೆ ಇನ್ನೂ 10 ಮಂದಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರುಗಳ ಆರೋಗ್ಯವನ್ನು ವಿಚಾರಿಸಲು ಕೇಂದ್ರ ಸಚಿವ ಸೋಮಣ್ಣ ಆಗಮಿಸಿದ್ದರು. ಆದರೆ ಸ್ಥಳದಲ್ಲಿ ಅಧಿಕಾರಿಗಳು ಇಲ್ಲದಿದ್ದನ್ನು ಕಂಡು ಕೆಂಡಮಂಡಲರಾದ ಸಚಿವ ಸೋಮಣ್ಣ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗೆ ತೀವ್ರ ತರಾಟೆಗೆ ತೆಗೆದುಕೊಂಡರು. ಕೇವಲ ರಾಜ್ಯ ಸರ್ಕಾರ ಸೀಮಿತವೇ ಕೇಂದ್ರ ಸರ್ಕಾರ ನಿಮಗೆ ಲೆಕ್ಕಕ್ಕೆ ಇಲ್ಲವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ ಅವರಿಗೆ ಇಂದು ಸಂಜೆಯೊಳಗೆ ನನಗೆ ವರದಿ ನೀಡಬೇಕು ಎಂದು ತಾಕೀತು ಮಾಡಿದರು.
ಇದನ್ನೂ ಓದಿ: ಬಿಎಸ್ವೈ ವಿರುದ್ಧ ಜಾಮೀನುರಹಿತ ಬಂಧನ ವಾರೆಂಟ್ ಜಾರಿ: ಶೋಭಾ ಕರಂದ್ಲಾಜೆ ಹೇಳಿದ್ದೇನು? - Shobha Karandlaje