ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ನಡುವೆ ವಿಧಾನ ಪರಿಷತ್ ಚುನಾವಣೆಗೂ ಮೈತ್ರಿ ಮುಂದುವರೆಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ಗೆ 2 ಸ್ಥಾನ ಬಿಟ್ಟುಕೊಟ್ಟು, ಬಿಜೆಪಿ 4 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಇಂದು ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ವಿಧಾನ ಪರಿಷತ್ನ 6 ಸ್ಥಾನಗಳಲ್ಲಿ 2 ಜೆಡಿಎಸ್ಗೆ ಬಿಟ್ಟುಕೊಟ್ಟು, ನಾವು 4 ಸ್ಥಾನಗಳಲ್ಲಿ ನಾವು ಸ್ಪರ್ಧೆ ಮಾಡುತ್ತೇವೆ. ಎಲ್ಲೆಲ್ಲಿ ಬಿಟ್ಟುಕೊಡಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಇಂದು ಸಂಜೆ ಬಿಜೆಪಿ ರಾಷ್ಟ್ರ ಅಧ್ಯಕ್ಷ ಜೆ.ಪಿ.ನಡ್ಡಾ ತೀರ್ಮಾನ ಮಾಡಲಿದ್ದಾರೆ ಎಂದರು.
ರಾಜ್ಯದಲ್ಲಿ 25 ಸ್ಥಾನ ಗೆಲ್ಲುತ್ತೇವೆ: ನರೇಂದ್ರ ಮೋದಿ ಅವರು ಮತ್ತೇ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೆ ಪ್ರಧಾನಿ ಆಗುತ್ತಾರೆ. ಇದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ. ಮುಂದೆ ಯಾವ ರೀತಿ ಕೆಲಸ ಮಾಡಬೇಕು ಎಂಬುದರ ಬಗ್ಗೆ ಪ್ರಧಾನಿ ಚಿಂತನೆ ಮಾಡ್ತಾ ಇದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ನಾವು ಕನಿಷ್ಠ 24 ರಿಂದ 25 ಸ್ಥಾನಗಳನ್ನು ಗೆಲ್ಲುತ್ತೇವೆ. ಕಾಂಗ್ರೆಸ್ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆಗಿದ್ದರೂ ಕಾಂಗ್ರೆಸ್ನಲ್ಲಿ ಪ್ರಧಾನಿ ಆಗುವ ಯೋಗ್ಯತೆ ಯಾರಿಗಿದೆ ಎಂದು ಪ್ರಶ್ನೆ ಮಾಡಿದ್ದ ಯಡಿಯೂರಪ್ಪ ವಿಧಾನಸಭೆಯ ಚುನಾವಣೆಯ ರೀತಿಯೇ ಬೇರೆ.. ಆದರೆ ದೇಶದಲ್ಲಿ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು ಎಂಬ ಅಭಿಪ್ರಾಯ ಎಲ್ಲರಲೂ ಇದೆ. ಆದ್ದರಿಂದ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುತ್ತದೆ ಎಂದರು.
ರೈತ ಸಾಲ ಮನ್ನಾ ಮಾಡಿ: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದು, ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲದಿಂದ ರೈತರು ಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿ ಅವರಿಗೆ ನೆರವು ಆಗಬೇಕು ಎಂದು ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದರು.
ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವಹಿಸಿ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಿದ್ರೆ ಸಿಬಿಐಗೆ ವಹಿಸಬೇಕು. ಬಹುತೇಕ ಜನರ ಅಭಿಪ್ರಾಯ ಇದಾಗಿದ್ದು, ಇದರಿಂದ ಪೆನ್ ಡ್ರೈವ್ ಪ್ರಕರಣವನ್ನ ಸಿಬಿಐಗೆ ವಹಿಸಿದ್ರೆ ಮಾತ್ರ ತನಿಖೆ ಪಾರದರ್ಶಕವಾಗಿ ನಡೆಯುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಮಾಧ್ಯಮದವರು ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದ ಬಿಎಸ್ವೈ ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಓದಿ: ರಾಜ್ಯ ಸರ್ಕಾರದ ಗ್ಯಾರಂಟಿ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ : ಬಿ ಎಸ್ ಯಡಿಯೂರಪ್ಪ - B S Yediyurappa