ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣದ ವಿರುದ್ದ ಪ್ರತಿಭಟಿಸಿದ್ದ ಕಾಂಗ್ರೆಸ್ ಮುಖಂಡರು, ವಕ್ತಾರರು, ಕಾರ್ಯಕರ್ತರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರಕ್ಕೆ ಅವಮಾನಿಸಿದ್ದಾರೆ ಎಂದು ಜೆಡಿಎಸ್ ಮುಖಂಡರು ಆರೋಪಿಸಿದ್ದು, ಘಟನೆಯನ್ನು ಖಂಡಿಸಿದ್ದಾರೆ.
ಭಾನುವಾರ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಮುಖಂಡರಾದ ಮಾಜಿ ಮೇಯರ್ ಪದ್ಮಾವತಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಟ ಅಮರನಾಥ್ ಸೇರಿದಂತೆ ಹಲವರ ವಿರುದ್ಧ ಜೆಡಿಎಸ್ ಮಾಜಿ ಎಂ.ಎಲ್.ಸಿ ಶ್ರೀಕಂಠೇಗೌಡ, ಮುಖಂಡರಾದ ರಾಜು ಗೌಡ, ಗಂಗಾಧರ್ ಮೂರ್ತಿ ಹಾಗು ಮತ್ತಿತರರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಬಳಿಕ ಮಾತನಾಡಿದ ಶ್ರೀಕಂಠೇಗೌಡ, "ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ದೇಶದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರಗಳಿಗೆ ಅವಮಾನಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸಿದರೆ ಜಾತ್ಯತೀತ ಜನತಾದಳ ಸಹ ಪ್ರತಿಭಟನೆ ನಡೆಸಲಿದೆ" ಎಂದರು.
ಹಾಸನ ಪ್ರಕರಣದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿ ಬಳಿ ಹಾಗೂ ರೇಸ್‌ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹೆಚ್ಡಿಡಿ ಮತ್ತು ಹೆಚ್ಡಿಕೆ ಭಾವಚಿತ್ರಕ್ಕೆ ಪೊರಕೆ ಪ್ರದರ್ಶಿಸಿದ್ದರು.