ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ (ಸೋಮವಾರ) ನಾಲ್ಕು ಲೋಕಸಭಾ ಕ್ಷೇತ್ರಗಳ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು-ಉಡುಪಿ ಕ್ಷೇತ್ರಗಳ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವಿ ಮಾಡಿದರು.
ಈಶ್ವರಪ್ಪ, ದಾವಣಗೆರೆ ನಾಯಕರು ಗೈರು: ಬಿಜೆಪಿ ಹಿರಿಯ ನಾಯಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಈಗಾಗಲೇ ಯಡಿಯೂರಪ್ಪ ಕುಟುಂಬದ ಮೇಲೆ ಮುನಿಸಿಕೊಂಡಿದ್ದಾರೆ. ತಮ್ಮ ಪುತ್ರ ಕಾಂತೇಶ್ಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಲು ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರಣರು ಎಂದು ಅವರಿಬ್ಬರ ವಿರುದ್ದ ಗರಂ ಆಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿಯೂ ಅವರು ಹೇಳಿದ್ದಾರೆ. ಇದಕ್ಕಾಗಿ ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.
ಅಭ್ಯರ್ಥಿ ಬದಲಿಸುವಂತೆ ದಾವಣಗೆರೆ ಬಿಜೆಪಿ ರೆಬೆಲ್: ದಾವಣಗೆರೆ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ವಿರುದ್ದ ದಾವಣಗೆರೆ ಜಿಲ್ಲೆ ಬಿಜೆಪಿಯೇ ರೆಬಲ್ ಆಗಿದೆ. ಸಿದ್ದೇಶ್ಬರ್ ಕಳೆದ ಅವಧಿಯಲ್ಲಿ ಇದು ನನ್ನ ಕೊನೆಯ ಚುನಾವಣೆ ಎಂದು ಘೋಷಣೆ ಮಾಡಿದ್ದರು. ಇದರಿಂದ ಹೊಸಬರಿಗೆ ಅವಕಾಶ ಸಿಗಬಹುದೆಂಬ ನಿರೀಕ್ಷೆ ಇತ್ತು. ಆದರೆ, ಸಿದ್ದೇಶ್ವರ್ ತಮ್ಮ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯವಾಗಿ ಯಾವುದೇ ಮಾಜಿ ಶಾಸಕರನ್ನೂ ಸಂಪರ್ಕಿಸದೆ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ ಎಂದು ಜಿಲ್ಲಾ ಬಿಜೆಪಿ ನಾಯಕರು ಕೋಪಗೊಂಡಿದ್ದಾರೆ.
ಜಿಲ್ಲೆಯ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಬಸವರಾಜ್ ನಾಯ್ಕ್, ದಾವಣಗೆರೆ ಉತ್ತರ ಮತಕ್ಷೇತ್ರದ ಪರಾಜಿತ ಅಭ್ಯರ್ಥಿ ಬಿ.ಜಿ.ಅಜಯ್ ಕುಮಾರ್, ದಾವಣಗೆರೆ ದಕ್ಷಿಣ ಮತಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್, ಮಾಜಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಪುತ್ರ ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಹಾಗೂ ಜಗಳೂರು ಮಾಜಿ ಶಾಸಕ ಗುರಲಿಂಗನಗೌಡ ಮತ್ತು ಅವರ ಪುತ್ರ ಬಿಜೆಪಿ ಮುಖಂಡ, ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಡಾ.ರವಿಕುಮಾರ್ ಹೀಗೆ ಹಲವರು ರೆಬಲ್ ಆಗಿದ್ದಾರೆ. ಇದರಿಂದ ದಾವಣಗೆರೆಯಲ್ಲಿ ಸಿದ್ದೇಶ್ವರ್ vs ಬಿಜೆಪಿ ನಾಯಕರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಸಂಸದ ನಾರಾಯಣ ಸ್ವಾಮಿ ಹೊಳಲ್ಕರೆ, ಶಾಸಕ ಚಂದ್ರಪ್ಪ ಇಬ್ಬರೂ ಸಹ ಮೋದಿ ಕಾರ್ಯಕ್ರಮದಲ್ಲಿ ಹಾಜರಿದ್ದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಮಾಜಿ ಶಾಸಕರು ಹಾಜರಿದ್ದರು.
ಇದನ್ನೂ ಓದಿ: 'ವಿಕಸಿತ ಭಾರತ' ವಾಟ್ಸ್ಆ್ಯಪ್ ಸಂದೇಶದ ವಿರುದ್ಧ ಚುನಾವಣಾ ಆಯೋಗಕ್ಕೆ ಪ್ರತಿಪಕ್ಷಗಳಿಂದ ದೂರು