ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕಲಬುರಗಿ ಬಂದ್‌ಗೆ ಇಂದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಬಂದ್ ಆರಂಭವಾಯಿತು. ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಹೀಗಾಗಿ ವ್ಯಾಪಾರ-ವಹಿವಾಟು ಸ್ಥಗಿತಗೊಂಡಿದೆ. ಬಸ್, ಆಟೋ ಸಂಚಾರ ಕೂಡಾ ಸ್ಥಗಿತಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು. ವೃದ್ಧರು, ಮಹಿಳೆಯರು ನಡೆದುಕೊಂಡೇ ಸಾಗುತ್ತಿದ್ದುದು ಕಂಡುಬಂತು.
ಪ್ರಮುಖ ರಸ್ತೆಗಳು ಮಾತ್ರವಲ್ಲದೆ, ಬಡಾವಣೆಗಳ ರಸ್ತೆಗಳನ್ನೂ ಬಂದ್ ಮಾಡಿದ ಕಾರಣ ವಾಹನ ಸವಾರರಿಗೆ ಅಡಚಣೆಯಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಡಿ.23ರ ಮಧ್ಯರಾತ್ರಿಯಿಂದ ಡಿ.24ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ - CONGRESS PROTEST AGAINST AMIT SHAH