ಮಂಗಳೂರು: ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯಲಿದ್ದು, ಆ ಮೂಲಕ ಈ ಬಾರಿಯ ಕಂಬಳ ಋತು ಆರಂಭವಾಗಲಿದೆ. ಇದೇ ಮೊದಲ ಬಾರಿ ಶಿವಮೊಗ್ಗದಲ್ಲೂ ಕಂಬಳ ಆಯೋಜಿಸಲು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ತೀರ್ಮಾನಿಸಿದೆ ಎಂದು ದ.ಕ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಶನಿವಾರ ಮೂಡುಬಿದಿರೆಯಲ್ಲಿ ನಡೆದ ಕಂಬಳ ಸಮಿತಿ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮೊದಲ ಕಂಬಳ ಅಕ್ಟೋಬರ್ 26ರಂದು ನಡೆಯಲಿದೆ. ಕೊನೆಯ ಕಂಬಳವನ್ನು 2025ರ ಏಪ್ರಿಲ್ 19ರಂದು ಶಿವಮೊಗ್ಗದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ವರ್ಷ ಒಟ್ಟು 26 ಕಂಬಳಗಳನ್ನು ನಡೆಸಲು ನಿರ್ಧರಿಸಲಾಗಿದೆ. ಮಂಗಳೂರಿನ ಪಿಲಿಕುಳ ಕಂಬಳಕ್ಕೆ ಮತ್ತೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.
ಕಂಬಳಗಳು ಈಚೆಗೆ ಶಿಸ್ತುಬದ್ಧವಾಗಿ ನಡೆಯುತ್ತಿದ್ದು, ಕರಾವಳಿಯ ಈ ಕ್ರೀಡೆಯನ್ನು ಹೆಚ್ಚು ಆಕರ್ಷಕವಾಗಿಸಲು ನಿಯಮಗಳನ್ನು ಬಿಗಿ ಮಾಡಲಾಗಿದೆ. ಆಯಾ ಕಂಬಳ ಸಮಿತಿಗಳು ಕಡ್ಡಾಯವಾಗಿ ಪಾಲಿಸಬೇಕಾಗಿರುವ ನಿಯಮಾವಳಿಗಳನ್ನು ಶೀಘ್ರದಲ್ಲೇ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಿಲಿಕುಳದಲ್ಲಿ ಆಯೋಜಿಸಲಾಗುವ ಕಂಬಳದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ 4 ದಿನ 'ತುಳುನಾಡ ವೈಭವ' ಕಾರ್ಯಕ್ರಮ ನಡೆಯಲಿದೆ. ಆ ಸಂದರ್ಭದಲ್ಲಿ ಕಂಬಳಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನ ಏರ್ಪಡಿಸಲಾಗುವುದು ಎಂದರು.
ದ.ಕ. ಜಿಲ್ಲೆಯಲ್ಲಿ ನಡೆಯುವ 24 ಕಂಬಳಗಳಿಗೆ ತಲಾ 5 ಲಕ್ಷ ರೂ. ಅನುದಾನ ನೀಡುವಂತೆ ಸರ್ಕಾರವನ್ನು ಕೋರಲಾಗಿದೆ ಎಂದು ಅವರು ತಿಳಿಸಿದರು. ಮಾಧ್ಯಮಗೋಷ್ಟಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ, ಉಪಾಧ್ಯಕ್ಷರಾದ ನವೀನಚಂದ್ರ ಆಳ್ವ, ಶ್ರೀಕಾಂತ ಭಟ್, ಸಂದೀಪ ಶೆಟ್ಟಿ, ಪ್ರಶಾಂತ ಕಾಜವ, ರಶ್ಮಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು, ಕೋಶಾಧಿಕಾರಿ ಚಂದ್ರಹಾಸ ಸನಿಲ್, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್ ಕಂಗಿನಮನೆ ಉಪಸ್ಥಿತರಿದ್ದರು.
ಇದನ್ನೂ ಓದಿ: ಒಲಿಂಪಿಕ್ನಲ್ಲಿ ಗೆದ್ದ ಚಿನ್ನವನ್ನು ಸಾಕು ನಾಯಿಗೆ ಅರ್ಪಿಸಿದ ಅಥ್ಲೀಟ್: ವಿಡಿಯೋ ವೈರಲ್ - PARIS OLYMPICS 2024