ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ. ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್ ದಯನೀಯ ಸೋಲು ಅನುಭವಿಸಿದೆ ಎಂದು ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂಂತ್ರಿ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.
ನಗರದ ಅರಮನೆ ಮೈದಾನದಲ್ಲಿ ಇಂದು ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನೂತನ ಕೇಂದ್ರ ಸಚಿವರು ಹಾಗೂ ಸಂಸದರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧದ ಆಕ್ರೋಶವನ್ನು ಜನ ಚುನಾವಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಆಮಿಷ, ಹಣಬಲದ ಹೊರತಾಗಿಯೂ 19 ಕ್ಷೇತ್ರಗಳಲ್ಲಿ ಜನರು ಎನ್ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಕಾರ್ಯಕರ್ತರ ಪರಿಶ್ರಮದಿಂದ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು ಎಂದರು.
ಟಿಕೆಟ್ ಕೊಡುವುದರಲ್ಲಿ ಆದ ವ್ಯತ್ಯಾಸದಿಂದ 3-4 ಸ್ಥಾನ ನಾವು ಕಳೆದುಕೊಂಡೆವು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130ರಿಂದ 140 ಸ್ಥಾನ ಗೆಲ್ಲಲು ಈಗಿನಿಂದಲೇ ಪ್ರಯತ್ನ ಆರಂಭಿಸಬೇಕು. ಸಂಸದರು ಅವರವರ ಕ್ಷೇತ್ರಗಳಲ್ಲಿ ಮೋದಿಯ ಜನ ಸೇವಕರಾಗಿ ಕೆಲಸ ಮಾಡಬೇಕಿದೆ. ಕಾಂಗ್ರೆಸ್ ಅಂದರೆ ಅಭಿವೃದ್ಧಿ ಶೂನ್ಯ ಎಂಬುದನ್ನು ಮನವರಿಕೆ ಮಾಡಬೇಕಾಗಿದೆ. ಬಿಬಿಎಂಪಿ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಚುನಾವಣೆಗಳನ್ನು ಬಿಜೆಪಿ-ಜೆಡಿಎಸ್ ಒಟ್ಟಾಗಿ ಎದುರಿಸಬೇಕಿದೆ ಎಂದು ಹೇಳಿದರು.
ಅಹಂಕಾರಕ್ಕೆ ಜನ ಕಪಾಳಮೋಕ್ಷ- ಜೋಶಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ರಾಜ್ಯದಲ್ಲಿ ಅಪಪ್ರಚಾರದ ನಡುವೆಯೂ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ 19 ಕ್ಷೇತ್ರಗಳಲ್ಲಿ ಗೆದ್ದಿದೆ. ಈ ಮೂಲಕ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಅಹಂಕಾರಕ್ಕೆ ಜನ ಕಪಾಳಮೋಕ್ಷ ಮಾಡಿದ್ದಾರೆ ಎಂದರು.
ಇವರು ಗ್ಯಾರಂಟಿ ನೀಡಿ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಎಳೆದಿದ್ದಾರೆ. ಮೂರನೇ ಬಾರಿ ಮೋದಿ ಪ್ರಧಾನಿ ಆಗಿದ್ದಕ್ಕೆ ಕಾಂಗ್ರೆಸ್ಗೆ ಹೊಟ್ಟೆಕಿಚ್ಚು ಶುರುವಾಗಿದೆ. ಬಿಜೆಪಿಯನ್ನು ವಿರೋಧಿಸಲೆಂದೇ ಸೋಕಾಲ್ಡ್ 'ಇಂಡಿಯಾ' ಮೈತ್ರಿಕೂಟ ಹುಟ್ಟಿಕೊಂಡಿದೆ. ಈ ಮೈತ್ರಿ ಒಕ್ಕೂಟಕ್ಕೆ ಅರ್ಥವೇ ಇಲ್ಲ. ಕಾಂಗ್ರೆಸ್ ಪಕ್ಷ ದೇಶದ ಜನರಲ್ಲಿ ಭ್ರಮೆಯನ್ನು ಬಿತ್ತುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ವಿಚಾರದಲ್ಲಿ ಒಬ್ಬ ಸಚಿವರಿಂದ ರಾಜೀನಾಮೆ ಕೊಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾನು ಸಾಚಾ ಎಂದು ಹೇಳುತ್ತಿದ್ದಾರೆ. ಮಾನ ಮರ್ಯಾದೆ ಇದ್ದರೆ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕಿತ್ತು. ದೇಶದಲ್ಲಿ ಕಾಂಗ್ರೆಸ್ ಸೋತ ತಕ್ಷಣ ಸಿದ್ದರಾಮಯ್ಯ ಬೆಲೆ ಏರಿಕೆ ಮಾಡಿದ್ದಾರೆ. ಜನರ ವಿರುದ್ಧ ದ್ವೇಷದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಜೋಶಿ ದೂರಿದರು.
ನೂತನ ಸಂಸದರಿಗೆ ಸನ್ಮಾನ: ಎನ್ಡಿಎ ನೂತನ ಸಂಸದರಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಹಾಗೂ ಡಾ.ಸಿ.ಎನ್.ಮಂಜುನಾಥ್, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸೇರಿದಂತೆ ಸಂಸದರಾಗಿ ಆಯ್ಕೆಯಾದ 19 ಸಂಸದರನ್ನು ಅಭಿನಂದಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹಾಗೂ ಶಾಸಕರು ಸೇರಿ ಎರಡೂ ಪಕ್ಷದ ಹಲವು ನಾಯಕರು ಉಪಸ್ಥಿತರಿದ್ದರು.
ಇದನ್ನೂ ಓದಿ: ಸೂರಜ್ ರೇವಣ್ಣ ವಿಚಾರವಾಗಿ ಅಧಿಕೃತ ದೂರು ದಾಖಲಾಗಿಲ್ಲ, ದೂರು ಬಂದರೆ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್