ಬೆಂಗಳೂರು: ಕೋಲ್ಕತ್ತಾದ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಖಂಡಿಸಿ ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘ ವತಿಯಿಂದ ಇಂದು ಆಯೋಜಿಸಿರುವ ಒಂದು ದಿನದ ಪ್ರತಿಭಟನೆಯ ಸಂದರ್ಭದಲ್ಲಿ ಅಗತ್ಯ ತುರ್ತು ಸೇವೆ ಒದಗಿಸಲು ಸರ್ಕಾರ ತೀರ್ಮಾನಿಸಿದೆ.
ಕೋಲ್ಕತಾದ ಆರ್.ಜಿ. ಕರ್ ವೈದ್ಯಕೀಯ ಸಂಸ್ಥೆಯ ಕರ್ತವ್ಯನಿರತ ಯುವ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘದ ಕರೆ ನೀಡಿದೆ. ಇದಕ್ಕೆ ಬೆಂಬಲ ಸೂಚಿಸಿ, ಶನಿವಾರ ಪ್ರತಿಭಟನೆಯಲ್ಲಿ ಭಾಗವಹಿಸಿ ತುರ್ತು ಸೇವೆ ಹೊರತುಪಡಿಸಿ, ಇತರೆ ಎಲ್ಲಾ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಸಚಿವರಿಗೆ ಪತ್ರ ನೀಡಿದೆ.

ಅದರಂತೆ, ಇಂದು ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ವೈದ್ಯಕೀಯ ಸೇವೆಯು ವ್ಯತ್ಯಯವಾಗಿ ಸಾರ್ವಜನಿಕ ಆರೋಗ್ಯ ಸೇವೆಗೆ ದಕ್ಕೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಎಲ್ಲಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಿ ಸಾರ್ವಜನಿಕ ತುರ್ತು ವೈದ್ಯಕೀಯ ಸೇವೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಈ ಹಿನ್ನೆಲೆಯಲ್ಲಿ ಯಾವುದೇ ವೈದ್ಯರಿಗೆ ರಜೆ ಮಂಜೂರು ಮಾಡಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಓದಿ: ವೈದ್ಯಕೀಯ ಕೋರ್ಸ್ಗಳ ನೋಂದಣಿಗೆ ಕೆಇಎ ಅಂತಿಮ ಅವಕಾಶ - Medical Course Registration