ಬೆಂಗಳೂರು: ಕೈಗಾರಿಕಾ ಇಲಾಖೆಯ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರಲ್ಲಿ ನಡೆದ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪ ಸಂಬಂಧ ಮಾಜಿ ಸಚಿವ ಮುರಗೇಶ ನಿರಾಣಿ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಆದರೆ, ತನಿಖೆಗೆ ಅರ್ಜಿದಾರರು ಸಹಕರಿಸಬೇಕು. ಅವರನ್ನು ಬಂಧಿಸುವ ಅಥವಾ ವಶಕ್ಕೆ ಪಡೆದುಕೊಳ್ಳಲು ಮುಂದಾಗಬಾರದು ಎಂದು ತನಿಖಾಧಿಕಾರಿಗಳಿಗೆ ಪೀಠ ನಿರ್ದೇಶನ ನೀಡಿದೆ.
ಪ್ರಕರಣದ ತನಿಖೆ ನಡೆಸುವಂತೆ ನಗರದ ಹೈಗ್ರೌಂಡ್ಸ್ ಠಾಣಾ ಪೊಲೀಸರಿಗೆ ನಿರ್ದೇಶಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಕೋರಿ ಮಾಜಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೆರಡು ಅರ್ಜಿಗಳು ಸಲ್ಲಿಕೆಯಾಗಿವೆ, ಎಲ್ಲ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆಗೆ ಪರಿಗಣಿಸಬೇಕು. ಹೊಸದಾಗಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅದಕ್ಕೆ, ಹೊಸದಾಗಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಅರ್ಜಿದಾರರನ್ನು ಬಂಧಿಸಬಾರದು ಎಂದು ಈಗಾಗಲೇ ಮೊದಲ ಅರ್ಜಿಯಲ್ಲಿ ಮಧ್ಯಂತರ ಆದೇಶ ನೀಡಲಾಗಿದೆ. ಈ ಹೊಸ ಅರ್ಜಿಗಳಿಗೂ ಅದು ಅನ್ವಯವಾಗಲಿದೆ. ಈಗ ಹೊಸದಾಗಿ ನ್ಯಾಯಾಲಯದ ಮುಂದೆ ಬಂದಿರುವ ಅರ್ಜಿದಾರರು ಮ್ಯಾಜಿಸ್ಟ್ರೇಟ್ ಮುಂದೆ ವಿಚಾರಣೆಗೆ ಹಾಜರಾಗಲಿ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿತು.
ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಬಹುದು. ಆದರೆ, ತನಿಖೆಗೆ ಸಹಕರಿಸಿದರೆ, ಅರ್ಜಿದಾರರನ್ನು ತನಿಖಾಧಿಕಾರಿಗಳು ಬಂಧಿಸುವಂತಿಲ್ಲ ಎಂದು ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶ ಮುಂದಿನ ವಿಚಾರಣೆವರೆಗೆ ವಿಸ್ತರಣೆಯಾಗಲಿದೆ ಎಂದು ನ್ಯಾಯಪೀಠ ಹೇಳಿತು.
ಇದನ್ನೂ ಓದಿ: ಆನೆಗಳ ಸಾವು ಪ್ರಕರಣ: ಕೆಪಿಟಿಸಿಎಲ್, ಎಸ್ಕಾಂಗಳಿಗೆ ಹೈಕೋರ್ಟ್ ನೋಟಿಸ್ ಜಾರಿ - High Court