ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣೆ ಕಾವು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ತನ್ನ 6 ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಆರೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ಮೇಲ್ಮನೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಐವರು ಕೈ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದರು. ಅದರಂತೆ ಕಾಂಗ್ರೆಸ್ನಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿ ಗೌಡ, ಆಗ್ನೇಯ ಶಿಕ್ಷಕ ಕ್ಷೇತ್ರದಿಂದ ಕೆ.ಬಿ.ಶ್ರೀನಿವಾಸ್, ನೈಋತ್ಯ ಶಿಕ್ಷಕ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್ ಹೆಸರು ಘೋಷಿಸಿತ್ತು.
ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಬ್ಬಿರುವ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಮರಿತಿಬ್ಬೇಗೌಡ ಹೆಸರನ್ನು ಅಂತಿಮಗೊಳಿಸಿ ಮಲ್ಲಿಕಾರ್ಜುನ್ ಖರ್ಗೆ ಆದೇಶಿಸಿದ್ದಾರೆ. ಹೀಗಾಗಿ ಕೈ ಅಭ್ಯರ್ಥಿಗಳು ಈಗಾಗಲೇ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಆರಂಭಿಸಿ, ಬಿಜೆಪಿ-ಜೆಡಿಎಸ್‌ನಿಂದ ಒಂದು ಹೆಜ್ಜೆ ಮುಂದೆ ಸಾಗುತ್ತಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡರ ಹೆಸರು ಫೈನಲ್ ಆಗಿತ್ತು. ಈಗ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಬಾರಿ ಜೆಡಿಎಸ್‌ನಿಂದ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಈ ಬಾರಿ ಕಾಂಗ್ರೆಸ್ನಿಂದ ಮತ್ತೆ ಸ್ಪರ್ಧಿಸುತ್ತಿದ್ದಾರೆ. ಇತ್ತೀಚೆಗೆ ಜೆಡಿಎಸ್‌ನಿಂದ ಮುನಿಸಿಕೊಂಡಿದ್ದ ಅವರು, ಅವಧಿಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಕಳೆದ 24 ವರ್ಷಗಳಿಂದ ಎಂಎಲ್ಸಿಯಾಗಿ ಚುನಾಯಿತರಾಗುತ್ತಿದ್ದಾರೆ. ಇದೀಗ ಕಾಂಗ್ರೆಸ್ನಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಚುನಾವಣಾ ಪ್ರಕ್ರಿಯೆ: ಜೂನ್ 3ರಂದು ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.
ಮೇ 10ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಮೇ 16. ನಾಮಪತ್ರ ಪರಿಶೀಲನೆ ಮೇ 17ಕ್ಕೆ ನಡೆಯಲಿದೆ. ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಜೂನ್ 3ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.