ಬೆಂಗಳೂರು: ರಾಜ್ಯದಲ್ಲಿ ಮಳೆ ಮತ್ತಷ್ಟು ಚುರುಕು ಪಡೆದಿದ್ದು, ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಧಾರಾಕಾರ ವರ್ಷಧಾರೆ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮುಂದಿನ 24 ಗಂಟೆಗಳಿಗೆ ರೆಡ್ ಅಲರ್ಟ್ ಕೊಡಲಾಗಿದೆ. ಜೊತೆಗೆ, ಗುರುವಾರ ಮತ್ತು ಶುಕ್ರವಾರ ಆರೆಂಜ್, ನಂತರದ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗಕ್ಕೆ ಇಂದು ಸೇರಿದಂತೆ ಮೂರು ದಿನ ಆರೆಂಜ್, ನಂತರದ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.
![Karnataka rain forecast](https://etvbharatimages.akamaized.net/etvbharat/prod-images/31-07-2024/kn-bng-04-weather-report-next-24-hrs-red-alert-to-dakhina-kannada-7210969_31072024184609_3107f_1722431769_612.jpeg)
ಚಿಕ್ಕಮಗಳೂರು ಜಿಲ್ಲೆಗೆ ಇಂದು ಮತ್ತು ನಾಳೆ ಆರೆಂಜ್ ಮತ್ತು ನಂತರದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ಇಂದು ಆರೆಂಜ್ ಮತ್ತು ನಾಳೆ ಯೆಲ್ಲೋ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದಿನಿಂದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ. ಇರಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ವರುಣನ ಆರ್ಭಟ ಮುಂದುವರಿಯಲಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
![Karnataka rain forecast](https://etvbharatimages.akamaized.net/etvbharat/prod-images/31-07-2024/kn-bng-04-weather-report-next-24-hrs-red-alert-to-dakhina-kannada-7210969_31072024184609_3107f_1722431769_465.jpeg)
ಸಿಲಿಕಾನ್ ಸಿಟಿಯಲ್ಲಿ ಹಗುರ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದ್ದು, ನಿರಂತರ ಗಾಳಿಯೂ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ.
''ದಕ್ಷಿಣ ಗುಜರಾತ್‌ನಿಂದ ಕೇರಳ ತೀರದ ಉದ್ದಕ್ಕೂ ಸರಾಸರಿ ಸಮುದ್ರಮಟ್ಟದಲ್ಲಿ ಆಫ್‌ಶೋರ್ ಟ್ರಫ್ ಮುಂದುವರೆಯಲಿದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಆದ್ದರಿಂದ ಅಲ್ಲಿನ ಭಾಗಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಹಾವೇರಿಯಲ್ಲಿ ಧಾರಾಕಾರ ಮಳೆ ; ಬೆಳೆಗಳು ಜಲಾವೃತ, ಕಂಗಾಲಾದ ರೈತರು - Crop damage by Flood water