ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಚಂಡಮಾರುತ ಮತ್ತೆ ಚುರುಕು ಪಡೆದ ಕಾರಣ ವಾಯುಭಾರ ಕುಸಿತ ಮುಂದುವರೆದಿದೆ. ಇದರಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಧಾರಾಕಾರ ಮಳೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕರಾವಳಿ ಕರ್ನಾಟಕದ ಜಿಲ್ಲೆಗಳು ಮತ್ತು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹೇಳಿದೆ.
ಒಂದು ಚಂಡಮಾರುತದ ಪರಿಚಲನೆಯು ನೈಋತ್ಯ ಮತ್ತು ಪಕ್ಕದ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿದೆ. ಇದು ಉತ್ತರ ತಮಿಳುನಾಡು ಕರಾವಳಿಯಲ್ಲಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತವನ್ನು ಸೃಷ್ಟಿ ಮಾಡಿದ್ದು, ಅದು ನೈಋತ್ಯಕ್ಕೆ ವಾಲುತ್ತಿದೆ. ಇನ್ನು ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲಿನ ಮತ್ತೊಂದು ಚಂಡಮಾರುತವು ಚುರುಕಾಗಿದ್ದು, ಇದರ ಪರಿಣಾಮದಿಂದ ಸೃಷ್ಟಿಯಾಗಿರುವ ಟ್ರಫ್ ದಕ್ಷಿಣ ಕರ್ನಾಟಕ ಮತ್ತು ರಾಯಲಸೀಮಾದಾದ್ಯಂತ ಚಲಿಸಿ ಆಂಧ್ರಪ್ರದೇಶದ ಕರಾವಳಿಯವರೆಗೆ ಸಾಗಲಿದೆ. ಇದು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿದೆ. ಚಂಡಮಾರುತಗಳ ಪರಿಣಾಮ ಇಂದು ಒಳನಾಡಿನ ಹಲವೆಡೆ ಮತ್ತು ಕರಾವಳಿಯ ಕೆಲವೆಡೆ ಮಳೆಯಾಗಿದೆ. ಜಿಲ್ಲೆಯ ನಾಯಕನಹಟ್ಟಿಯಲ್ಲಿ ಮತ್ತು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಅತಿ ಹೆಚ್ಚು 7 ಸೆಂ.ಮೀ ಮಳೆ ದಾಖಲಾಗಿದೆ - ಬೆಂಗಳೂರು ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್
ಇದನ್ನೂ ಓದಿ: ಬಾಗಲಕೋಟೆ: ಮಳೆಯಿಂದ ಈರುಳ್ಳಿ ಬೆಳೆಗೆ ಹಾನಿ, ಕಂಗಾಲಾದ ರೈತ