ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತಗಳು ಕರಾವಳಿಗಳಲ್ಲಿ ಮತ್ತಷ್ಟು ಚುರುಕಾಗಿದ್ದು, ಇವುಗಳ ಪ್ರಭಾವದಿಂದ ಒಳನಾಡಿನಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ 2 ಜಿಲ್ಲೆಗಳಿಗೆ ಆರೆಂಜ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಎಲ್ಲೆಲ್ಲಿ ಅಲರ್ಟ್?: ಮುಖ್ಯವಾಗಿ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ 24 ಗಂಟೆಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಕೂಡ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹೇಳಿದೆ.
ಒಂದು ಚಂಡಮಾರುತದ ಪರಿಚಲನೆಯು ಪಕ್ಕದ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿದೆ. ಈ ಕಾರಣಕ್ಕೆ ಉತ್ತರ ತಮಿಳುನಾಡು ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದ್ದು, ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ಎತ್ತರದಲ್ಲಿ ನೈಋತ್ಯಕ್ಕೆ ವಾಲುತ್ತದೆ. ಇನ್ನು ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲಿನ ಚಂಡಮಾರುತವು ದಕ್ಷಿಣ ಕರ್ನಾಟಕ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ವರೆಗೆ ಟ್ರಫ್ ನಿರ್ಮಾಣ ಮಾಡಿದೆ. ಈ ಹಿನ್ನೆಲೆಯಲ್ಲಿ ವಾಯುಭಾರ ಕುಸಿತ ಉಂಟಾಗಿ ಹಿಂಗಾರು ಮಳೆಯ ಪ್ರಮಾಣ ಹೆಚ್ಚಾಗಿದೆ. ಸದ್ಯ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಆಗುತ್ತಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಸಾಮಾನ್ಯವಾಗಿದೆ. ನಿನ್ನೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ (10 ಸೆಂ.ಮೀ) ದಾಖಲಾಗಿದೆ - ಬೆಂಗಳೂರು ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್
ಇದನ್ನೂ ಓದಿ: ಹಾವೇರಿ: ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿಹೋಗಿದ್ದ 12 ವರ್ಷದ ಬಾಲಕ ಸಾವು