ಬೆಂಗಳೂರು: ಮುಂಗಾರು ಮಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದುವರೆದಿದ್ದು, ಇಂದು ಮತ್ತು ನಾಳೆ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೂ ಕೂಡ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗ 30 ರಿಂದ 40 ಪ್ರತಿ ಕಿಲೋಮೀಟರ್ ವೇಗದಲ್ಲಿ ಇರಲಿದ್ದು, ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.
ಅತೀ ಹೆಚ್ಚು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ. ಮಳೆ ಬಿದ್ದಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತ 7 ಸೆಂ.ಮೀ ಮಳೆಯಾಗಿದೆ.
ನೈಋತ್ಯ ಮಾನ್ಸೂನ್ ರಾಜ್ಯದಲ್ಲಿ ಸಾಧಾರಣವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್.ಪುವಿಯರಸನ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ: ಕೆಆರ್ಎಸ್, ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ - Reservoir Levels
ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ, ರಸ್ತೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ - Rain Submerges Delhi