ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯು ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಇದರ ಜೊತೆ ಭಾರೀ ಮಳೆ ಆಗುವ ಸಾಧ್ಯತೆ ಕೂಡ ಹೆಚ್ಚಿದೆ. ಇನ್ನು ಉತ್ತರ ಕನ್ನಡ, ಹಾಸನ, ಮಂಡ್ಯ, ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ವರುಣ ಆರ್ಭಟಿಸಲಿದ್ದಾನೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಮುಂಗಾರುಪೂರ್ವ ಮಳೆ ಉತ್ತಮ: ಕೃಷಿ ಚಟುವಟಿಕೆ ಚುರುಕು, ಬಿತ್ತನೆ ಬೀಜಕ್ಕೆ ರೈತರ ನೂಕುನುಗ್ಗಲು - Seeds Distribution
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಜೊತೆಗೆ ಹಗುರ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 32 ಡಿಗ್ರಿ ಮತ್ತು 23 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.
ನೈರುತ್ಯ ಮಾನ್ಸೂನ್ ಇಂದು ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದಲ್ಲಿದೆ. ಇನ್ನೂ ದಕ್ಷಿಣ ಬಂಗಾಳ ಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಭಾಗಗಳು, ಅಂಡಮಾನ್ ಸಮುದ್ರ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮುಂದುವರೆದಿದೆ. ಈ ಪರಿಣಾಮ ರಾಜ್ಯದಲ್ಲಿ ಕೂಡ ಮಳೆ ಮುಂದುವರೆದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ.ರಾಜವೇಲ್ ಮಾಣಿಕ್ಕಂ ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಸಂಬಂಧಿ ಸಮಸ್ಯೆಗಳು: ಇಂದು ಸಿಎಂ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ - CM Siddaramaiah