ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಐವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 70 ಗ್ರಾಂ ಎಂಡಿಎಂಎ ಅನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಅಬ್ದುಲ್ ಶಾಕೀರ್ (24), ಹಸನ್ ಆಶೀರ್ (34), ಮೊಹಮ್ಮದ್ ನೌಷಾದ್ (22), ಯಾಸೀನ್ ಇಮ್ರಾಜ್ ಅಲಿಯಾಸ್ ಇಂಬು (35), ಕೇರಳದ ಕಣ್ಣೂರು ಜಿಲ್ಲೆಯ ರಿಯಾಜ್ ಎ.ಕೆ. (31) ಎಂದು ಗುರುತಿಸಲಾಗಿದೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 3,50,000 ರೂ. ಮೌಲ್ಯದ 70 ಗ್ರಾಂ ಎಂಡಿಎಂಎ, 5 ಮೊಬೈಲ್ ಫೋನ್ಗಳು, 1460 ರೂ. ನಗದು, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ 4,25,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಹಾಗೂ ಇತರ ಕಡೆಗಳಿಂದ ಎಂಡಿಎಂಎ ಅನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಹಸನ್ ಅಶಿರ್ ಎಂಬಾತನ ವಿರುದ್ಧ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟ ಪ್ರಕರಣವೊಂದು ದಾಖಲಾಗಿದೆ. ಇನ್ನೋರ್ವ ಆರೋಪಿ ಯಾಸೀನ್ ಇಮ್ರಾಜ್ ಎಂಬಾತನ ವಿರುದ್ಧ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಪೊಲೀಸ್ ಸ್ಟೇಷನ್ ಹಾಗೂ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿವೆ.
ಓದಿ: ಸಿಂಧನೂರಲ್ಲಿ ಕಿಡ್ನಾಪ್ ಆಗಿದ್ದ ನಾಲ್ವರು ಮಕ್ಕಳ ರಕ್ಷಣೆ: ಅಂತಾರಾಜ್ಯ ಅಪಹರಣಕಾರರ ಬಂಧನ - Children Kidnap Case