ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ - 2024 (ಕೆಸೆಟ್)ಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಕಟಗೊಂಡಿರುವ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಜನವರಿ 13ರಂದು ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣಪತ್ರ ನೀಡುವ ಪ್ರಕ್ರಿಯೆಗೆ ಅಂದು ಚಾಲನೆ ನೀಡಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಹೇಳಿದ್ದಾರೆ.
ದಾಖಲೆಗಳು ಸರಿಯಿದ್ದರೆ ಸ್ಥಳದಲ್ಲೇ ಪ್ರಮಾಣಪತ್ರ ವಿತರಣೆ: ಜನವರಿ 20ರವರೆಗೆ ತಾತ್ಕಾಲಿಕ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಯಲಿದ್ದು, ದಾಖಲೆಗಳು ಸಮರ್ಪಕವಾಗಿದ್ದರೆ ಸ್ಥಳದಲ್ಲೇ ಪ್ರಮಾಣಪತ್ರ ನೀಡಲಾಗುವುದು. ಜನವರಿ 13ರಂದು ಮುಖ್ಯಮಂತ್ರಿ ಕೆಇಎ ಕಚೇರಿಯಲ್ಲಿ ಹೆಚ್ಚುವರಿ ಕಟ್ಟಡದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಅದೇ ಸಂದರ್ಭದಲ್ಲಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆಗೂ ಚಾಲನೆ ನೀಡಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ನಿಗದಿಪಡಿಸಿದ ದಿನದಂದೇ ದಾಖಲೆಗಳನ್ನು ಪರಿಶೀಲನೆಗೊಳಪಡಿಸತಕ್ಕದ್ದು: ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ಬಗೆಗಿನ ಮಾಹಿತಿಯನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದಂದೇ ಹಾಜರಾಗಬೇಕು. ನಿಗದಿ ಪಡಿಸಿದ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳಿಗೆ ಇತರ ದಿನಾಂಕದಂದು ಮೂಲ ದಾಖಲೆಗಳ ಪರಿಶೀಲನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದಾಖಲೆಗಳ ಪರಿಶೀಲನೆ ವೇಳೆ ಮೂಲ ದಾಖಲೆಗಳು ಕಡ್ಡಾಯ: ಅಭ್ಯರ್ಥಿಗಳು ಸಲ್ಲಿಸುವ ಎಲ್ಲ ಮೂಲ ದಾಖಲೆಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಕೆಯಾಗಿರಬೇಕು. ಪರಿಶೀಲನೆಯ ಸಮಯದಲ್ಲಿ ಕಡ್ಡಾಯವಾಗಿ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗೆ ಕೆಇಎ ವೆಬ್ ಸೈಟ್ ನೋಡಲು ಸೂಚಿಸಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಎಚ್.ಪ್ರಸನ್ನ ವಿವರಿಸಿದ್ದಾರೆ.
ಇದನ್ನು ಓದಿ: ಗದಗ ಜಿಲ್ಲಾಡಳಿತದಿಂದ ನರ್ಸ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ