ಬೆಂಗಳೂರು: ಇಂದು ನಡೆಯಲಿರುವ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಕೆಎಸ್ಆರ್ಟಿಸಿಯು ಹೆಚ್ಚುವರಿ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುತ್ತಿದೆ.
ಮಂಗಳವಾರ ಕೆಪಿಎಸ್ಸಿಯ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಸುಮಾರು ಅಭ್ಯರ್ಥಿಗಳಿಗೆ ನಗರದ ಸುತ್ತಮುತ್ತಲಿನ ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಇನ್ನಿತರೆ ಜಿಲ್ಲೆಗಳಿಗೆ ಪರೀಕ್ಷೆ ಕೇಂದ್ರಗಳನ್ನು ಗುರುತಿಸಲಾಗಿದೆ. ಹೀಗಾಗಿ, ಅನುಕೂಲತೆಗಾಗಿ ಈ ಜಿಲ್ಲೆಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ, ತ್ವರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನಿಯಮಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಕೋರಿದ್ದರು. ಅದರಂತೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಅಡಚಣೆಯಾಗದಂತೆ ಸಾರಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ವಿಭಾಗದ ವತಿಯಿಂದ ಪ್ರಮುಖ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ಪರೀಕ್ಷೆ ನಡೆಯುವ ಕೇಂದ್ರ ಸ್ಥಾನಕ್ಕೆ ತೆರಳಲು ಅವಶ್ಯಕತೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ನಿರ್ಧರಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಜೋಗ ಜಲಪಾತ ನೋಡೋದು ಇನ್ಮುಂದೆ ಬಲು ದುಬಾರಿ: ವೀಕ್ಷಣೆಗೆ ಎರಡು ಗಂಟೆ ಮಾತ್ರ ಅವಕಾಶ - Jog Falls entry price increase