ಬೆಳಗಾವಿ: ಲೋಕಸಭೆ ಚುನಾವಣೆಗೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಮತಬೇಟೆ ನಡೆಸಲಿದ್ದು, ಮತ್ತೊಂದೆಡೆ ಮಧ್ಯಾಹ್ನ ಯರಗಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪ್ರಚಾರದ ಅಬ್ಬರ ಜೋರಾಗಿರಲಿದೆ.
ಬೆಳಗ್ಗೆ 10 ಗಂಟೆಗೆ ಮೋದಿ, ಮಾಲಿನಿ ಸಿಟಿ ಮೈದಾನದಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳ ಜನರನ್ನು ಉದ್ದೇಶಿಸಿ ಮಾತನಾಡುವರು. ಉಗಾರಖುರ್ದ್ದಲ್ಲಿ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತಯಾಚಿಸುವರು. ಬಳಿಕ ಯರಗಟ್ಟಿ ಪಟ್ಟಣದ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಮಧ್ಯಾಹ್ನ 2.30ಕ್ಕೆ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ನಡೆಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, " ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಳಗ್ಗೆ ಉಗಾರಖುರ್ದ್ದಲ್ಲಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ನಡೆಸಿ, ಹೆಲಿಕಾಪ್ಟರ್ ಮೂಲಕ ಯರಗಟ್ಟಿಗೆ ಆಗಮಿಸುವರು. ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವಾರು ಸಚಿವರು, ಜಿಲ್ಲೆಯ ಶಾಸಕರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದ್ದು, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಳೆಯಾದರೂ ಯಾವುದೇ ತೊಂದರೆಯಾಗದಂತೆ ಪೆಂಡಾಲ್‌ಗಳನ್ನು ಹಾಕಲಾಗಿದೆ" ಎಂದು ತಿಳಿಸಿದರು.
![ಕಾರ್ಯಕ್ರಮ ಸ್ಥಳ ಪರಿಶೀಲಿಸಿದ ಸಚಿವೆ](https://etvbharatimages.akamaized.net/etvbharat/prod-images/28-04-2024/bgm-tomorrow-siddaramayya-dks-prachar_27042024174916_2704f_1714220356_963.jpg)
"ಜಿಲ್ಲೆಯಲ್ಲಿ ಸಂಪೂರ್ಣ ಕಾಂಗ್ರೆಸ್ ಪರ ವಾತಾವರಣ ನಿರ್ಮಾಣವಾಗಿದೆ. ಭಾನುವಾರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಕಾರ್ಯಕರ್ತರಲ್ಲಿ ಇನ್ನಷ್ಟು ಉತ್ಸಾಹ ತುಂಬಲಿದ್ದಾರೆ. ಸ್ಥಳೀಯ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಅವರನ್ನು ಗೆಲ್ಲಿಸಲೇಬೇಕೆಂದು ಕ್ಷೇತ್ರದ ಜನರು ನಿರ್ಧರಿಸಿದ್ದು, ಅತ್ಯಧಿಕ ಬಹುಮತದಿಂದ ಕಾಂಗ್ರೆಸ್ ಗೆಲ್ಲಲಿದೆ. ಭಾನುವಾರದ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಬೇಕು" ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಚಿಕ್ಕೋಡಿ ಕ್ಷೇತ್ರದಲ್ಲಿ ಬಿಜೆಪಿಯ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ: ಇಂದು ಅಭ್ಯರ್ಥಿಗಳ ಪರ ಮತಯಾಚನೆ - Modi in Belagavi