ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯವಾಗಿದೆ. ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಶುಕ್ರವಾರದಿಂದ ಶುರುವಾಗಲಿದೆ.
ರೋಡ್ ಶೋ, ಬಹಿರಂಗ ಸಮಾವೇಶಗಳ ಮೂಲಕ ಚುನಾವಣೆಯ ಕಣ ರಂಗೇರಿದೆ. ಇಂದು ಕೊನೆ ದಿನವಾಗಿರುವ ಕಾರಣ ನಾಮಪತ್ರಗಳ ಸಲ್ಲಿಕೆಯ ಭರಾಟೆಯೂ ಜೋರಾಗಿತ್ತು. ಬಿಜೆಪಿ 24, ಕಾಂಗ್ರೆಸ್ 29, ಬಿಎಸ್ಪಿ 13, ಸಿಪಿಐಎಂ 1, ಜೆಡಿಎಸ್ 2, ಪಕ್ಷೇತರ 109, ನೋಂದಾಯಿತ ಮತ್ತು ನೋಂದಣಿಯಾಗದ ಪಕ್ಷಗಳ ಅಭ್ಯರ್ಥಿಗಳಿಂದ 90 ಸೇರಿದಂತೆ ಒಟ್ಟು ಇಂದು ಮಧ್ಯಾಹ್ನದ ಹೊತ್ತಿಗೆ 268 ನಾಮಪತ್ರಗಳು ಸಲ್ಲಿಕೆಯಾಗಿವೆ.
ಹಾಸನ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಇಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಶುಕ್ರವಾರ ನಡೆಯಲಿದ್ದು, ನಾಳೆ ಸಂಜೆ ವೇಳೆಗೆ ಕ್ರಮಬದ್ಧವಾದ ಹಾಗೂ ತಿರಸ್ಕೃತಗೊಂಡ ನಾಮಪತ್ರಗಳ ಪ್ರಕಟಣೆ ಮಾಡಲಾಗುತ್ತದೆ.
ಇದನ್ನೂ ಓದಿ: ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ: ಸಿಎಂ ಸಿದ್ದರಾಮಯ್ಯ - CM Siddaramaiah
ನಾಮಪತ್ರ ಸಲ್ಲಿಕೆಗೂ ಮುನ್ನ ಕೆಲ ಅಭ್ಯರ್ಥಿಗಳು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮತ್ತೆ ಕೆಲವರು ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ನಾಮಪತ್ರ ಸಲ್ಲಿಸಿದ ಬಳಿಕ ಕೆಲವರು ಕ್ಷೇತ್ರಗಳಲ್ಲಿ ಸಾರ್ವಜನಿಕ ಸಮಾವೇಶಗಳನ್ನು ನಡೆಸಿ ಅಭ್ಯರ್ಥಿಗಳ ಪರ ಪ್ರಚಾರ ಹಾಗೂ ಮತಯಾಚನೆ ಮಾಡಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಸಿದ್ದ ಕೆಲವು ಅಭ್ಯರ್ಥಿಗಳು ಅಬ್ಬರದ ರೋಡ್ ಶೋ ನಡೆಸಿ, ಶಕ್ತಿ ಪ್ರದರ್ಶನ ಮಾಡಿ ಮತ್ತೆ ನಾಮಪತ್ರ ಸಲ್ಲಿಸಿದರೆ, ಮತ್ತೆ ಕೆಲವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು.
ಇಂದು ಘಟಾನುಘಟಿ ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿ ಹೆಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರು ಸಾಥ್ ನೀಡಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್.ಮಂಜುನಾಥ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈಗಾಗಲೇ ನಾಮಪತ್ರ ಸಲ್ಲಿಸಿದ್ದ ಡಿ.ಕೆ. ಸುರೇಶ್ ಅವರೂ ಸಹ ಇಂದು ಮತ್ತೊಮ್ಮೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಉಮೇದುವಾರಿಕೆ ಸಲ್ಲಿಸಿದರು. ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಪಕ್ಷದ ಮುಖಂಡರು ಸಾಥ್ ನೀಡಿದರು. ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಇದೇ ಕ್ಷೇತ್ರದಿಂದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರೂ ಸಹ ತಮ್ಮ ನಾಮಪತ್ರ ಸಲ್ಲಿಸಿದರು. ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸಿದರು. ಈಗಾಗಲೇ ತಮ್ಮ ಉಮೇದುವಾರಿಕೆ ಸಲ್ಲಿಸಿರುವ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದರು. ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಕೂಡ ಉಮೇದುವಾರಿಕೆ ಸಲ್ಲಿಸಿದರು.
ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸ್ಪರ್ಧಿಸಲಿ ಅಂತಾನೇ ಅಮಿತ್ ಶಾ ನನ್ನನ್ನು ಭೇಟಿಯಾಗಿಲ್ಲ: ಈಶ್ವರಪ್ಪ - SHIVAMOGGA CONSTITUENCY